
ರಾಮನಗರ: ಟ್ಯೂಷನ್ ಮುಗಿಸಿ ಮನೆಗೆ ವಾಪಸ್ ಆಗುತ್ತಿದ್ದ ವಿದ್ಯಾರ್ಥಿಗಳಿಗೆ ಗೂಡ್ಸ್ ವಾಹನ ಡಿಕ್ಕಿಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮತ್ತೋರ್ವ ವಿದ್ಯಾರ್ಥಿ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿರುವ ಘಟನೆ ರಾಮನಗರದಲ್ಲಿ ನಡೆದಿದೆ.
10 ವರ್ಷದ ಸುಚೀತ್ ಮೃತ ಬಾಲಕ. ಆಗಸ್ಟ್ 9ರಂದು ರಾಮನಗರದ ಲಕ್ಷ್ಮೀಪುರ ಗ್ರಾಮದಲ್ಲಿ ಗೂಡ್ಸ್ ವಾಹನ ಹರಿದು 8 ವರ್ಷದ ಶಾಲಿನಿ ಹಾಗೂ 5 ವರ್ಷದ ದರ್ಶನ್ ಸ್ಥಳದಲ್ಲೇ ಮೃತಪಟ್ಟಿದ್ದರು. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಸುಚೀತ್ ನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಸಾವು-ಬದುಕಿನ ನಡುವೆ ಆಸ್ಪತ್ರೆಯಲ್ಲಿ ಹೋರಾಡಿದ್ದ ಬಾಲಕ ಚಿಕಿತ್ಸೆ ಫಲಕಾರಿಯಾಗದೇ ಇಂದು ಕೊನೆಯುಸಿರೆಳೆದಿದ್ದಾನೆ. ರಾಮನಗರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.