ಜಾಗತಿಕ ಆರ್ಥಿಕ ಹಿಂಜರಿತದ ಭೀತಿಯ ಹಿನ್ನೆಲೆಯಲ್ಲಿ ಹಲವು ಕಂಪನಿಗಳು ಉದ್ಯೋಗಿಗಳನ್ನು ಮನೆಗೆ ಕಳುಹಿಸುತ್ತಿವೆ. ಈಗಾಗಲೇ ಟ್ವಿಟ್ಟರ್, ಅಮೆಜಾನ್, ಸ್ವಿಗ್ಗಿ ಮೊದಲಾದ ಕಂಪನಿಗಳು ಈ ಕ್ರಮ ಕೈಗೊಂಡಿದ್ದು ಈಗ ಗೂಗಲ್ ಸಹ ಉದ್ಯೋಗಿಗಳ ವಜಾಕ್ಕೆ ಮುಂದಾಗಿದೆ.
ಗೂಗಲ್ ಸಿಇಓ ಸುಂದರ್ ಪಿಚೈ, ಈ ಕುರಿತಂತೆ ತಮ್ಮ ಉದ್ಯೋಗಿಗಳಿಗೆ ಪತ್ರವೊಂದನ್ನು ಬರೆದಿದ್ದು, ಅದರಲ್ಲಿ ಉದ್ಯೋಗಿಗಳ ವಜಾದಂತಹ ಕಠಿಣ ಕ್ರಮ ಕೈಗೊಳ್ಳುತ್ತಿರುವುದಕ್ಕೆ ವಿಷಾದ ವ್ಯಕ್ತಪಡಿಸಿದ್ದಾರೆ. ಆದರೆ ಮುಂದಿನ ಸವಾಲುಗಳನ್ನು ಎದುರಿಸುವ ಸಲುವಾಗಿ 12 ಸಾವಿರದಷ್ಟು ಉದ್ಯೋಗಿಗಳನ್ನು ಕಡಿತ ಮಾಡುವುದು ಅನಿವಾರ್ಯ ಎಂದು ಸುಂದರ್ ಪಿಚೈ ಕಂಪನಿ ತೆಗೆದುಕೊಳ್ಳುತ್ತಿರುವ ಕ್ರಮವನ್ನು ಸಮರ್ಥಿಸಿಕೊಂಡಿದ್ದಾರೆ.
ಕಳೆದ ವರ್ಷದ ಅಂತ್ಯದಿಂದ ಬಹಳಷ್ಟು ಕಂಪನಿಗಳು ಉದ್ಯೋಗಿಗಳ ಸಂಖ್ಯೆಯನ್ನು ಕಡಿತ ಮಾಡುವ ಕಾರ್ಯದಲ್ಲಿ ತೊಡಗಿಕೊಂಡಿದ್ದು, ಅದು ಈ ವರ್ಷವೂ ಮುಂದುವರೆದಿದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಕಂಪನಿಗಳು ಇದೆ ಕ್ರಮ ತೆಗೆದುಕೊಳ್ಳಲಿವೆ ಎನ್ನಲಾಗುತ್ತಿದ್ದು, ಹೀಗಾಗಿ ಉದ್ಯೋಗಿಗಳಿಗೆ ಕೆಲಸ ಕಳೆದುಕೊಳ್ಳುವ ಭೀತಿ ಎದುರಾಗಿದೆ.