alex Certify BIG NEWS: 2014 ರಿಂದ ಈವರೆಗೆ 12 ʼನಕಲಿ ವಿವಿʼ ಗಳಿಗೆ ಬೀಗ; ಕೇಂದ್ರ ಸರ್ಕಾರದಿಂದ ಮಹತ್ವದ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: 2014 ರಿಂದ ಈವರೆಗೆ 12 ʼನಕಲಿ ವಿವಿʼ ಗಳಿಗೆ ಬೀಗ; ಕೇಂದ್ರ ಸರ್ಕಾರದಿಂದ ಮಹತ್ವದ ಮಾಹಿತಿ

ನವದೆಹಲಿ: 2014 ರಿಂದೀಚೆಗೆ ದೇಶದಲ್ಲಿ ಸುಮಾರು 12 ನಕಲಿ ವಿಶ್ವವಿದ್ಯಾನಿಲಯಗಳನ್ನು ಮುಚ್ಚಲಾಗಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ. ಶಿಕ್ಷಣ ಖಾತೆ ರಾಜ್ಯ ಸಚಿವ ಡಾ. ಸುಕಾಂತ ಮಜುಂದಾರ್ ಲೋಕಸಭೆಯಲ್ಲಿ ಲಿಖಿತ ಉತ್ತರ ನೀಡುವ ಮೂಲಕ ಈ ಮಾಹಿತಿಯನ್ನು ಬಹಿರಂಗಪಡಿಸಿದ್ದಾರೆ.

ವಿಶ್ವವಿದ್ಯಾನಿಲಯ ಧನ ಆಯೋಗದ (ಯುಜಿಸಿ) ಅಧಿಕೃತ ವೆಬ್‌ಸೈಟ್‌ನಲ್ಲಿ 21 ನಕಲಿ ವಿಶ್ವವಿದ್ಯಾನಿಲಯಗಳ ಪಟ್ಟಿಯನ್ನು ಪ್ರಕಟಿಸಲಾಗಿದೆ ಮತ್ತು ಆಯಾ ರಾಜ್ಯ ಸರ್ಕಾರಗಳು ಈ ವಿಶ್ವವಿದ್ಯಾನಿಲಯಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ.

ನಕಲಿ ವಿಶ್ವವಿದ್ಯಾನಿಲಯಗಳ ವಿರುದ್ಧ ಸರ್ಕಾರ ಯಾವ ಕ್ರಮಗಳನ್ನು ಕೈಗೊಳ್ಳುತ್ತಿದೆ ಎಂಬ ಪ್ರಶ್ನೆಗೆ ಉತ್ತರಿಸಿದ ಸಚಿವರು, “ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವುದು ರಾಜ್ಯ ಸರ್ಕಾರಗಳ ವಿಷಯವಾಗಿದೆ” ಎಂದು ಹೇಳಿದ್ದಾರೆ. ಕೇಂದ್ರ ಸರ್ಕಾರವು ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಮುಖ್ಯ ಕಾರ್ಯದರ್ಶಿಗಳಿಗೆ 21 ನಕಲಿ ಸಂಸ್ಥೆಗಳನ್ನು ಮುಚ್ಚಲು ಮತ್ತು “ವಿಶ್ವವಿದ್ಯಾನಿಲಯಗಳು” ಎಂದು ತಮ್ಮನ್ನು ತಾವು ತಪ್ಪಾಗಿ ಬಿಂಬಿಸಿಕೊಳ್ಳುವ, ಪದವಿಗಳನ್ನು ನೀಡುವ ಮತ್ತು ತಮ್ಮ ಹೆಸರಿನೊಂದಿಗೆ “ವಿಶ್ವವಿದ್ಯಾನಿಲಯ” ಎಂಬ ಪದವನ್ನು ಬಳಸುವ ಮೂಲಕ ವಿದ್ಯಾರ್ಥಿಗಳನ್ನು ವಂಚಿಸುವ ಮತ್ತು ಮೋಸ ಮಾಡುವಲ್ಲಿ ತೊಡಗಿರುವವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ನಿರ್ದೇಶಿಸಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಈ ಪ್ರಯತ್ನಗಳ ಪರಿಣಾಮವಾಗಿ, 2014 ರಿಂದ 12 ನಕಲಿ ವಿಶ್ವವಿದ್ಯಾನಿಲಯಗಳನ್ನು ಮುಚ್ಚಲಾಗಿದೆ ಎಂದು ಸಚಿವರು ಲೋಕಸಭೆಗೆ ತಿಳಿಸಿದ್ದಾರೆ. ಯುಜಿಸಿಯ ನಕಲಿ ವಿಶ್ವವಿದ್ಯಾನಿಲಯಗಳ ಪಟ್ಟಿಯಲ್ಲಿ ಇಲ್ಲದ ತಮ್ಮ ರಾಜ್ಯಗಳು ಅಥವಾ ಕೇಂದ್ರಾಡಳಿತ ಪ್ರದೇಶಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಇತರ ಯಾವುದೇ ನಕಲಿ ವಿಶ್ವವಿದ್ಯಾನಿಲಯಗಳಿದ್ದರೆ ಅವುಗಳನ್ನು ಗುರುತಿಸುವಂತೆಯೂ ಸರ್ಕಾರವು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳನ್ನು ವಿನಂತಿಸಿದೆ.

ಈ ಮೋಸದ ಸಂಸ್ಥೆಗಳು ಮತ್ತು ವಿಶ್ವವಿದ್ಯಾನಿಲಯಗಳ ವಿರುದ್ಧ ಎಫ್‌ಐಆರ್‌ಗಳನ್ನು ದಾಖಲಿಸುವುದು, ನಕಲಿ ಪದವಿಗಳನ್ನು ನೀಡುವ ಅನಧಿಕೃತ ಸಂಸ್ಥೆಗಳಿಗೆ ಶೋಕಾಸ್ ನೋಟಿಸ್ ಮತ್ತು ಎಚ್ಚರಿಕೆ ನೋಟಿಸ್‌ಗಳನ್ನು ನೀಡುವುದು ಸೇರಿದಂತೆ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಡಾ. ಮಜುಂದಾರ್ ವಿವರಿಸಿದ್ದಾರೆ. ಅಲ್ಲದೆ, ಸಾರ್ವಜನಿಕರು, ವಿದ್ಯಾರ್ಥಿಗಳು, ಪೋಷಕರು ಮತ್ತು ಇತರ ಪಾಲುದಾರರಿಗೆ ಎಚ್ಚರಿಕೆ ನೀಡುವ ಸಲುವಾಗಿ ಎಲ್ಲಾ ನಕಲಿ ವಿಶ್ವವಿದ್ಯಾನಿಲಯಗಳ ಪಟ್ಟಿಯನ್ನು ಸಾಮಾಜಿಕ ಮಾಧ್ಯಮ ಮತ್ತು ಯುಜಿಸಿ ವೆಬ್‌ಸೈಟ್ ಮೂಲಕ ಪ್ರಕಟಿಸಲಾಗುತ್ತದೆ. ಈ 21 “ನಕಲಿ ವಿಶ್ವವಿದ್ಯಾನಿಲಯಗಳಲ್ಲಿ”, ಗರಿಷ್ಠ ಎಂಟು ದೆಹಲಿಯಲ್ಲಿ ಕಾರ್ಯನಿರ್ವಹಿಸುತ್ತಿವೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...