ಬೆಂಗಳೂರು : ವಾಲ್ಮೀಕಿ ಹಗರಣದಲ್ಲಿ ಸರ್ಕಾರದ ಪಾತ್ರ ಇಲ್ಲ. ಹಣಕಾಸು ಇಲಾಖೆಯ ಪಾತ್ರ ಕೂಡ ಇಲ್ಲ. ಮುಡಾ ವಿಚಾರದಲ್ಲೂ ಕಾನೂನುಬಾಹಿರವಾಗಿ ಏನೂ ನಡೆದಿಲ್ಲ. ಎಲ್ಲವೂ ಕಾನೂನುಬದ್ಧವಾಗಿ, ನಿಯಮಗಳ ಪ್ರಕಾರವೇ ನಡೆದಿದೆ ಎನ್ನುವುದನ್ನು ಪಕ್ಷದ ವರಿಷ್ಠರಿಗೆ ಮನವರಿಕೆ ಮಾಡಿಸಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸದಲ್ಲಿ ನಡೆದ ಸಭೆಯ ಬಳಿಕ ಸುದ್ದಿಗಾರರ ಜೊತೆ ಅವರು ಮಾತನಾಡಿದರು.
ವಾಲ್ಮೀಕಿ ಹಗರಣದಲ್ಲಿ ಸರ್ಕಾರದ ಪಾತ್ರ ಇಲ್ಲ. ಹಣಕಾಸು ಇಲಾಖೆಯ ಪಾತ್ರ ಕೂಡ ಇಲ್ಲ. ಮುಡಾ ವಿಚಾರದಲ್ಲೂ ಕಾನೂನುಬಾಹಿರವಾಗಿ ಏನೂ ನಡೆದಿಲ್ಲ. ಎಲ್ಲವೂ ಕಾನೂನುಬದ್ಧವಾಗಿ, ನಿಯಮಗಳ ಪ್ರಕಾರವೇ ನಡೆದಿದೆ ಎನ್ನುವುದನ್ನು ಪಕ್ಷದ ವರಿಷ್ಠರಿಗೆ ಮನವರಿಕೆ ಮಾಡಿಸಿದ್ದೇವೆ. ಪರಿಶಿಷ್ಠ ಪಂಗಡಕ್ಕೆ ಸೇರಿದ ಹಣ ದುರುಪಯೋಗ ಆಗಿಲ್ಲ. ವಾಲ್ಮೀಕಿ ಹಗರಣದಲ್ಲಿ ಹಣ ವಶಪಡಿಸಿಕೊಳ್ಳಲಾಗುತ್ತಿದೆ. ಪ್ರಕರಣದ ತನಿಖೆ ನಡೆಯುತ್ತಿದೆ ಎನ್ನುವುದನ್ನೂ ಅರ್ಥ ಮಾಡಿಸಿದ್ದೇವೆ. ಬಿಜೆಪಿಯ ಸೇಡಿನ ಮತ್ತು ಅಸೂಯೆಯ ರಾಜಕಾರಣ ಹೈಕಮಾಂಡ್ ಅವರಿಗೂ ಮನವರಿಕೆಯಾಗಿದೆ. ಬಿಜೆಪಿಯ ಪಾದಯಾತ್ರೆಗೆ ಪ್ರತಿಯಾಗಿ ಏನು ಮಾಡಬೇಕು ಎನ್ನುವುದನ್ನು ಬೆಂಗಳೂರಿಗೆ ತೆರಳಿದ ಬಳಿಕ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ಅವರ ಜೊತೆ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳುತ್ತೇವೆ. ಕೇಂದ್ರ ಬಜೆಟ್ ನಲ್ಲಿ ರಾಜ್ಯಕ್ಕೆ ಅನ್ಯಾಯವಾಗಿದೆ. ಬಜೆಟ್ ಪೂರ್ವ ಸಭೆಯಲ್ಲಿ ರಾಜ್ಯದಿಂದ ಇಟ್ಟಿದ್ದ ಯಾವ ಬೇಡಿಕೆಗಳನ್ನೂ ಈಡೇರಿಸಲಾಗಿಲ್ಲ. ಹೀಗಾಗಿ ನಿರ್ಮಲಾ ಸೀತಾರಾಮನ್ ಅವರು ರಾಜ್ಯಕ್ಕೆ ಅನ್ಯಾಯ ಮಾಡಿದ್ದಾರೆ ಎನ್ನುವ ಕುರಿತೂ ಸಭೆಯಲ್ಲಿ ಚರ್ಚಿಸಲಾಯಿತು. ರಾಜ್ಯ ಸರ್ಕಾರವನ್ನು ಅಸ್ಥಿರಗೊಳಿಸುವ ಬಿಜೆಪಿಯ ಹುನ್ನಾರದಲ್ಲಿ ಅವರಿಗೆ ಎಳ್ಳಷ್ಟೂ ಯಶಸ್ಸು ಸಿಗುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.