ಬೆಂಗಳೂರು : ಈ ಬಾರಿ ಪರಿಸರ ಸ್ನೇಹಿಯಾಗಿ ಗಣೇಶೋತ್ಸವ ಆಚರಿಸಬೇಕು. ಪಿಒಪಿ ಗಣೇಶ ಮೂರ್ತಿ ತಯಾರಿಸುವುದನ್ನು ನಿಷೇಧಿಸಲಾಗಿದೆ ಎಂದು ಸರ್ಕಾರ ಸೂಚನೆ ನೀಡಿದೆ.
ಗಣೇಶ ಮೂರ್ತಿ ತಯಾರಿಕಾ ಘಟಕಗಳಿಗೆ ಪಾಲಿಕೆ, ಮಾಲಿನ್ಯ ನಿಯಂತ್ರಣ ಮಂಡಳಿ ಹಾಗೂ ಪೊಲೀಸ್ ಅಧಿಕಾರಿಗಳ ತಂಡ ಅನಿರೀಕ್ಷಿತ ಭೇಟಿ ನೀಡಿ ಪರಿಶೀಲನೆ ನಡೆಸಬೇಕು.
ಪಿಒಪಿ ಗಣೇಶ ಮೂರ್ತಿಗಳನ್ನು ತಯಾರಿಸುತ್ತಿರುವುದು ಕಂಡುಬಂದರೆ ವಶಕ್ಕೆ ಪಡೆದು ಅವರಿಗೆ ದಂಡ ವಿಧಿಸಬೇಕು ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಬಿಬಿಎಂಪಿ ವ್ಯಾಪ್ತಿಯಲ್ಲಿ ಗಣೇಶ ಪ್ರತಿಷ್ಠಾಪನೆಗಾಗಿ ಅನುಮತಿ ನೀಡಲು 63 ಉಪ ವಿಭಾಗ ಕಚೇರಿಗಳಲ್ಲಿ ಏಕಗವಾಕ್ಷಿ ಕೇಂದ್ರಗಳನ್ನು ತೆರೆದು ಪಾಲಿಕೆ, ಪೊಲೀಸ್, ಬೆಸ್ಕಾಂ ಹಾಗೂ ಅಗ್ನಿಶಾಮಕ ಅಧಿಕಾರಿಗಳನ್ನು ತ್ವರಿತವಾಗಿ ನಿಯೋಜಿಸಬೇಕು ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಇನ್ನೇನು ಕೆಲವೇ ದಿನಗಳಲ್ಲಿ ಗಣೇಶ ಹಬ್ಬ ಬರಲಿದೆ. ಈ ಬಾರಿ ಗಣೇಶ ಚತುರ್ಥಿಯನ್ನು ಮತ್ತಷ್ಟು ಸಂಭ್ರಮಿಸಲು ನಾಡಿನೆಲ್ಲೆಡೆ ತಯಾರಿಗಳು ಶುರುವಾಗಿವೆ.ನಾವೆಲ್ಲರೂ ಪರಿಸರ ಸ್ನೇಹಿ ಗಣೇಶ ವಿಗ್ರಹವನ್ನು ಪೂಜಿಸುವ ಮೂಲಕ ಹಬ್ಬವನ್ನು ಸಂಭ್ರಮದಿಂದ ಆಚರಿಸೋಣ. ಪಿಒಪಿ ಗಣೇಶ ಮೂರ್ತಿಗಳ ಬದಲಾಗಿ ಮಣ್ಣಿನ ಗಣಪನನ್ನು ಪ್ರತಿಷ್ಠಾಪಿಸಿ ಪೂಜಿಸೋಣ. ಪರಿಸರ ಸ್ನೇಹಿ ಗಣೇಶೋತ್ಸವ ನಮ್ಮ ಆದ್ಯತೆಯಾಗುವ ಮೂಲಕ ಪರಿಸರ ಸ್ನೇಹಿ ಹಬ್ಬವನ್ನು ಆಚರಿಸೋಣ ಎಂದು ಸರ್ಕಾರ ಕರೆ ನೀಡಿದೆ.