ಬೆಂಗಳೂರು: ಗ್ರಾಮ ಪಂಚಾಯಿತಿಗಳ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗಾವಣೆಯನ್ನು ಪ್ರಸಕ್ತ ಸಾಲಿನಿಂದ ಕೌನ್ಸೆಲಿಂಗ್ ಮೂಲಕ ನಡೆಸಬೇಕೆಂದು ಸರ್ಕಾರ ಆದೇಶ ಹೊರಡಿಸಿದೆ.
ಸ್ಥಳೀಯ ಆಡಳಿತ ಸಂಸ್ಥೆಗಳಲ್ಲಿ ಸೇವೆಗಳ ಶೀಘ್ರ ಪೂರೈಕೆ, ಭ್ರಷ್ಟಾಚಾರ ನಿಯಂತ್ರಣ ಮತ್ತು ದಕ್ಷತೆ ಹೆಚ್ಚಳ ಉದ್ದೇಶದಿಂದ ಗ್ರಾಮ ಪಂಚಾಯಿತಿ ಅಧಿಕಾರಿಗಳು ಮತ್ತು ಇತರ ಸಿಬ್ಬಂದಿಯನ್ನು 2024 -25 ನೇ ಸಾಲಿನಿಂದ ಕೌನ್ಸೆಲಿಂಗ್ ಮೂಲಕ ವರ್ಗಾವಣೆ ಮಾಡಲು ಈ ಬಾರಿಯ ಬಜೆಟ್ ನಲ್ಲಿ ಘೋಷಿಸಲಾಗಿತ್ತು. ಅಂತೆಯೇ ಸರ್ಕಾರ ನಿರ್ಧಾರ ಕೈಗೊಂಡಿದೆ.
ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಕಾರ್ಯದರ್ಶಿಗಳು ಮತ್ತು ಗ್ರಾಮೀಣ ಅಭಿವೃದ್ಧಿ ಸಹಾಯಕರು, ದ್ವಿತೀಯ ದರ್ಜೆ ಲೆಕ್ಕ ಸಹಾಯಕರ ವರ್ಗಾವಣೆಯನ್ನು ಕೌನ್ಸೆಲಿಂಗ್ ಮೂಲಕ ನಡೆಸಲು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ವತಿಯಿಂದ ಆದೇಶ ನೀಡಲಾಗಿದೆ.