ಬೆಂಗಳೂರು: ಹಿರಿಯ ನಾಗರಿಕರ ನೆಮ್ಮದಿಗೆ ಹಾಗೂ ಆರೋಗ್ಯವನ್ನು ಖಾತ್ರಿಪಡಿಸುವುದು ಸರ್ಕಾರದ ಕರ್ತವ್ಯ. ಸುಮಾರು 50 ಲಕ್ಷ ಹಿರಿಯ ನಾಗರಿಕರಿಗೆ ಮಾಸಾಶನ ನೀಡಲಾಗುತ್ತಿದೆ. ಈ ಮಾಸಾಶನದ ಮೊತ್ತವನ್ನು ಹೆಚ್ಚಿಸುವ ಬಗ್ಗೆ ಪರಿಶೀಲಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದ್ದಾರೆ.
ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಆಯೋಜಿಸಿದ್ದ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಹಿರಿಯರ ಬದುಕನ್ನು ಕೇವಲ ಆದರ್ಶವಾಗಿ ಕಾಣದೆ, ಸಮಾಜಮುಖಿ ಕಾರ್ಯಗಳಿಗೆ ಅವರಿಂದ ಪ್ರೇರಣೆ ಪಡೆಯಬೇಕು. ಆಗ ಅವರಿಗೆ ನಾವು ನಿಜವಾಗಿ ಗೌರವ ಸಲ್ಲಿಸಿದಂತಾಗುತ್ತದೆ ಎಂದರು.
ಈ ಬಾರಿ ವಿಶ್ವ ಹಿರಿಯ ನಾಗರಿಕರ ದಿನಾಚರಣೆಯನ್ನು “ಘನತೆಯ ಬಾಳಿನೊಂದಿಗೆ ವಯೋಪಕ್ವತೆ: ವಿಶ್ವದಾದ್ಯಂತ ಹಿರಿಯ ಜೀವಿಗಳಿಗೆ ಆರೈಕೆ ಮತ್ತು ಬೆಂಬಲ ವ್ಯವಸ್ಥೆಗಳನ್ನು ಸದೃಢಗೊಳಿಸುವುದರ ಮಹತ್ವ” ಎಂಬ ವಿಶ್ವಸಂಸ್ಥೆಯ ಘೋಷ ವಾಕ್ಯದೊಂದಿಗೆ ಆಚರಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.