ಬೆಂಗಳೂರು: ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಹೊತ್ತಲ್ಲೇ ರಾಜ್ಯ ಸರ್ಕಾರ ಕರ್ನಾಟಕ ರಾಜ್ಯ ನೇಕಾರರ ಅಭಿವೃದ್ಧಿ ನಿಗಮ ಮತ್ತು ಕರ್ನಾಟಕ ರಾಜ್ಯ ಕೊಡವ ಅಭಿವೃದ್ಧಿ ನಿಗಮ ಸ್ಥಾಪಿಸಿ ಆದೇಶ ಹೊರಡಿಸಿದೆ.
ಹಿಂದುಳಿದ ವರ್ಗಗಳ ಮೀಸಲಾತಿ ಪಟ್ಟಿಯಲ್ಲಿರುವ ದೇವಾಂಗ, ಹಟಗಾರ್, ಹಟಕಾರ್, ಕುರುಹಿನ ಶೆಟ್ಟಿ, ಬಿಳಿಮಗ್ಗ, ತೊಗಟರು, ತೊಗಟವೀರ ಮೊದಲಾದ ಜಾತಿಗಳಿಗೆ ಪ್ರವರ್ಗ 2 ರ ಅಡಿ ಶೈಕ್ಷಣಿಕ ಮತ್ತು ಔದ್ಯೋಗಿಕ ಮೀಸಲಾತಿ ಒದಗಿಸಲಾಗಿದೆ. ಎಲ್ಲಾ ಜಾತಿಗಳ ಸರ್ವತೋಮುಖ ಅಭಿವೃದ್ಧಿಗೆ ಪೂರಕವಾಗುವಂತೆ ತಕ್ಷಣದಿಂದಲೇ ಜಾರಿಗೆ ಬರುವಂತೆ ರಾಜ್ಯ ನೇಕಾರರ ಅಭಿವೃದ್ಧಿ ನಿಗಮ ಸ್ಥಾಪನೆ ಮಾಡಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಆದೇಶ ಹೊರಡಿಸಿದೆ.
ಅದೇ ರೀತಿ ಹಿಂದುಳಿದ ವರ್ಗಗಳ ಮೀಸಲಾತಿ ಪಟ್ಟಿಯಲ್ಲಿ ನಮೂದಾದ ಕೊಡಗರು ಸಮುದಾಯಕ್ಕೆ ಪ್ರವರ್ಗ 3ಎ ಅಡಿ ಶೈಕ್ಷಣಿಕ ಹಾಗೂ ಔದ್ಯೋಗಿಕ ಮೀಸಲಾತಿ ಕಲ್ಪಿಸಿದ್ದು, ಸಮುದಾಯದ ಸರ್ವತೋಮುಖ ಅಭಿವೃದ್ಧಿಗೆ ಕರ್ನಾಟಕ ರಾಜ್ಯ ಕೊಡವ ಅಭಿವೃದ್ಧಿ ನಿಗಮ ಸ್ಥಾಪನೆ ಮಾಡಲಾಗಿದೆ. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಈ ಬಗ್ಗೆ ಆದೇಶ ಹೊರಡಿಸಲಾಗಿದೆ.