ಮಡಿಕೇರಿ: ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಯುವನಿಧಿ ಯೋಜನೆಯಲ್ಲಿ 2023-24ನೇ ಸಾಲಿನಲ್ಲಿ ಸ್ನಾತಕ ಪದವಿ, ಸ್ನಾತಕೋತ್ತರ ಪದವಿ ಮತ್ತು ಡಿಪ್ಲೋಮಾ ಪದವಿಯಲ್ಲಿ ತೇರ್ಗಡೆಯಾಗಿ ಉದ್ಯೋಗ ಸಿಗದ ಅರ್ಹ ಅಭ್ಯರ್ಥಿಗಳು, ಪದವೀಧರರಿಗೆ ಪ್ರತಿ ತಿಂಗಳಿಗೆ 3 ಸಾವಿರ ರೂ. ಹಾಗೂ ಡಿಪ್ಲೋಮಾ ಪದವೀಧರರಿಗೆ 1500 ರೂ. ನಿರುದ್ಯೋಗಿ ಭತ್ಯೆಯನ್ನು ನೀಡಲಾಗುತ್ತದೆ. ಫಲಿತಾಂಶದ ನಂತರ ನಿರುದ್ಯೋಗಿಗಳಾಗಿ 180 ದಿನಗಳು ಪೂರೈಸಿ ಹೆಸರನ್ನು ನೋಂದಾಯಿಸಿಕೊಂಡ ಅಭ್ಯರ್ಥಿಗಳಿಗೆ ನೇರ ನಗದು ವರ್ಗಾವಣೆ ಮಾಡಲಾಗುತ್ತಿದೆ.
ಹೆಚ್ಚಿನ ಸಂಖ್ಯೆಯಲ್ಲಿ ಅಭ್ಯರ್ಥಿಗಳು ಯುವನಿಧಿ ಯೋಜನೆಯ ಸೌಲಭ್ಯವನ್ನು ಪಡೆಯಲು ಅನುಕೂಲವಾಗುವಂತೆ ವಿಶೇಷ ನೋಂದಣಿ ಅಭಿಯಾನವನ್ನು ಫೆಬ್ರವರಿ 15 ರವರೆಗೆ ವಿಸ್ತರಿಸಲಾಗಿದೆ. ವಿಶೇಷ ನೋಂದಣಿ ಅಭಿಯಾನವು ಜಿಲ್ಲೆಯ ಎಲ್ಲಾ ತಾಲ್ಲೂಕು ಪಂಚಾಯಿತಿ ಕಚೇರಿಯ ಆವರಣದಲ್ಲಿ ನಡೆಯಲಿದೆ. ಹೆಚ್ಚಿನ ಮಾಹಿತಿಗೆ ಉದ್ಯೋಗಾಧಿಕಾರಿ, ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಮಡಿಕೇರಿ ಇವರ ದೂರವಾಣಿ ಸಂಖ್ಯೆ 8296020826 ನ್ನು ಸಂಪರ್ಕಿಸಬಹುದು ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.