ಬೆಂಗಳೂರು: ರಾಜ್ಯದ ಹಲವು ಶಾಲೆಗಳಲ್ಲಿ ವಿದ್ಯಾರ್ಥಿಗಳಿಂದ ಶೌಚಾಲಯ ತೊಳೆಸಿರುವ ಪ್ರಕರಣ ಇತ್ತೀಚೆಗೆ ಬೆಳಕಿಗೆ ಬಂದಿತ್ತು. ಇದು ತೀವ್ರ ವಿವಾದಕ್ಕೆ ಕಾರಣವಾಗಿತ್ತು. ಇದೀಗ ಇದೇ ಪ್ರಕರಣದ ಬಗ್ಗೆ ಬಿಜೆಪಿ ಸಂಸದ ಗೋವಿಂದ ಕಾರಜೋಳ ಹೇಳಿಕೆ ನೀಡಿದ್ದು, ಹೊಸ ವಿವಾದಕ್ಕೆ ಕಾರಣವಾಗಿದೆ.
ವಿದ್ಯಾರ್ಥಿಗಳು ಶಾಲೆಯಲ್ಲಿ ಶೌಚಾಲಯ ಸ್ವಚ್ಛಗೊಳಿಸಿದರೆ ತಪ್ಪೇನು? ಜಪಾನ್ ನಲ್ಲಿ ಮಾಡುತ್ತಾರಲ್ವಾ? ಎಂದು ಗೋವಿಂದ ಕಾರಜೋಲ ಪ್ರಶ್ನಿಸಿದ್ದಾರೆ.
ಜಪಾನ್ ನಲ್ಲಿ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಶೌಚಾಲಯ ಸ್ವಚ್ಛಗೊಳಿಸುತ್ತಾರೆ. ನಾನು ವಿದ್ಯಾರ್ಥಿಯಾಗಿದ್ದ ಸಮಯದಲ್ಲಿ ನನ್ನ ವಸತಿ ನಿಲಯವನ್ನು ಗುಡಿಸಿ ಸ್ವಚ್ಛಗೊಳಿಸುತ್ತಿದ್ದೆ ಎಂದಿದ್ದಾರೆ.
ಶಿಕ್ಷಕರು ವಿದ್ಯಾರ್ಥಿಗಳಿಂದ ಶೌಚಾಲಯ ಸ್ವಚ್ಚ ಮಾಡಿಸಿರುವ ವಿಡಿಯೋವನ್ನು ನಾನು ನೋಡಿದ್ದೇನೆ. ಶಿಕ್ಷಕರ ವಿರುದ್ಧ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ವಿದ್ಯಾರ್ಥಿಗಳು ಶೌಚಾಲಯ ಸ್ವಚ್ಚ ಮಾಡಿದ್ದನ್ನು ದೊಡ್ಡ ಅಪರಾಧ ಎಂಬಂತೆ ಬಿಂಬಿಸಲಾಗುತ್ತಿದೆ. ವಿದ್ಯಾರ್ಥಿಗಳು ಪೊರಕೆ ಹಿಡಿಯುವುದು ಅಪರಾಧ ಎನ್ನುವ ರೀತಿ ಕಾಣುತ್ತಿದ್ದಾರೆ. ಇದರಿಂದ ವಿದ್ಯಾರ್ಥಿಗಳಿಗೆ ಸ್ವಚ್ಚತೆ ಕೆಲಸ ಕೀಳು ಎಂಬ ಭಾವನೆ ಮೂಡುತ್ತಿದೆ. ಮಕ್ಕಳಿಗೆ ಸ್ವಚ್ಛತೆ ಬಗ್ಗೆ ತಿಳಿ ಹೇಳಬೇಕಿದೆ ಎಂದು ತಿಳಿಸಿದ್ದಾರೆ.