ನವದೆಹಲಿ: ಬಡವರಿಗೆ 2.95 ಕೋಟಿ ಮನೆಗಳನ್ನು ನಿರ್ಮಿಸಲು ಕೇಂದ್ರ ಸರ್ಕಾರ ಅನುಮೋದಿಸಿದೆ. ಮುಂದಿನ 5 ವರ್ಷಗಳಲ್ಲಿ 2 ಕೋಟಿ ಹೆಚ್ಚು ಮನೆಗಳನ್ನು ನಿರ್ಮಿಸಲಾಗುವುದು.
ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ನವದೆಹಲಿಯಲ್ಲಿ ಇಂದು ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿ, ಪ್ರತಿಯೊಬ್ಬ ಬಡವರಿಗೂ ಪಕ್ಕಾ ಮನೆಗಳನ್ನು ಒದಗಿಸುವ ಪ್ರಯತ್ನದಲ್ಲಿ ಸರ್ಕಾರ 2.95 ಕೋಟಿ ಮನೆಗಳಿಗೆ ಅನುಮೋದನೆ ನೀಡಿದೆ. ಮುಂದಿನ ಐದು ವರ್ಷಗಳಲ್ಲಿ ಇನ್ನೂ ಎರಡು ಕೋಟಿ ಮನೆಗಳನ್ನು ನಿರ್ಮಿಸಲಾಗುವುದು ಎಂದು ಹೇಳಿದ್ದಾರೆ.
ಪ್ರಧಾನಮಂತ್ರಿ ಆವಾಸ್ ಯೋಜನೆ-ಗ್ರಾಮೀಣ ಯೋಜನೆಯಡಿ 38 ಲಕ್ಷ ಮನೆಗಳನ್ನು ಮಂಜೂರು ಮಾಡಲಾಗಿದ್ದು, ಇದಕ್ಕಾಗಿ 10600 ಕೋಟಿ ರೂಪಾಯಿಗಳಿಗಿಂತ ಹೆಚ್ಚು ಹಣವನ್ನು ಬಿಡುಗಡೆ ಮಾಡಲಾಗಿದೆ. ಪಿಎಂ-ಜನ್ಮನ್ ಅಡಿಯಲ್ಲಿ, 2024-25 ನೇ ಸಾಲಿಗೆ ನಿರ್ದಿಷ್ಟವಾಗಿ ಬುಡಕಟ್ಟು ಕುಟುಂಬಗಳಿಗೆ 46 ಸಾವಿರಕ್ಕೂ ಹೆಚ್ಚು ಮನೆಗಳನ್ನು ಹಂಚಲಾಗಿದೆ ಎಂದು ಅವರು ಹೇಳಿದರು.