ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ತಡೆಗೆ 8 ಮಹಾನಗರಗಳಲ್ಲಿ ನೈಟ್ ಕರ್ಫ್ಯೂ ಜಾರಿ ಮಾಡಲಾಗಿದೆ. ಆದರೆ, ಇದರಿಂದ ಪರಿಣಾಮಕಾರಿಯಾಗಿ ಕೊರೊನಾ ಸೋಂಕು ತಡೆಯುವುದು ಸಾಧ್ಯವಾಗುವುದಿಲ್ಲ. ಈ ಹಿನ್ನೆಲೆಯಲ್ಲಿ ಮತ್ತಷ್ಟು ನಿರ್ಬಂಧಗಳೊಂದಿಗೆ ಸೋಂಕು ತಡೆಯುವ ನಿಟ್ಟಿನಲ್ಲಿ ಪರಿಣಾಮಕಾರಿ ಕ್ರಮ ಕೈಗೊಳ್ಳಬೇಕೆಂದು ಪ್ರಧಾನಿ ನರೇಂದ್ರ ಮೋದಿ ಸೂಚನೆ ನೀಡಿದ್ದಾರೆ.
ಸಿಎಂ ಬಿ.ಎಸ್. ಯಡಿಯೂರಪ್ಪ ಅವರಿಗೆ ಕರೆ ಮಾಡಿದ ಮೋದಿ, ರಾಜ್ಯದಲ್ಲಿ ಸೋಂಕು ತಡೆಗೆ ಕಠಿಣ ಕ್ರಮ ಕೈಗೊಳ್ಳಬೇಕೆಂದು ತಿಳಿಸಿದ್ದಾರೆ. ರಾಜ್ಯದಲ್ಲಿ ಕೈಗೊಂಡ ಕ್ರಮಗಳ ಬಗ್ಗೆ ಪ್ರಧಾನಿ ಮೆಚ್ಚುಗೆ ವ್ಯಕ್ತಪಡಿಸಿದ್ದು, ಮೈಕ್ರೋ ಕಂಟೈನ್ಮೆಂಟ್ ಜೋನ್ ಗಳ ಬಗ್ಗೆ ಹೆಚ್ಚಿನ ಗಮನ ನೀಡುವಂತೆ ಸಲಹೆ ನೀಡಿದ್ದಾರೆ.
ಈ ಹಿನ್ನೆಲೆಯಲ್ಲಿ ಆರೋಗ್ಯ ಸಚಿವ ಸುಧಾಕರ್ ಅಧ್ಯಕ್ಷತೆಯಲ್ಲಿ ಇಂದು ಮಧ್ಯಾಹ್ನ ತಾಂತ್ರಿಕ ಸಲಹಾ ಸಮಿತಿ ಸಭೆ ನಡೆಯಲಿದ್ದು, ಸೋಂಕು ತಡೆಗೆ ಮತ್ತಷ್ಟು ಪರಿಣಾಮಕಾರಿ ಕ್ರಮ ಕೈಗೊಳ್ಳಲು ತೀರ್ಮಾನಿಸಲಾಗುವುದು. ಮೊದಲ ಬಾರಿಗೆ ಸೋಂಕು ಹರಡಿದಾಗ ನಿರ್ಬಂಧಗಳೊಂದಿಗೆ ಸೋಂಕು ನಿಯಂತ್ರಿಸಲಾಗಿದ್ದು, ಅದೇ ಮಾದರಿಯಲ್ಲಿ ಬಿಗಿ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಲಾಗಿದೆ.