
ಬೆಂಗಳೂರು: ರಾಜ್ಯ ಸರ್ಕಾರಿ ನೌಕರರು ಮತ್ತು ಅವರ ಅವಲಂಬಿತ ಕುಟುಂಬ ಸದಸ್ಯರಿಗೆ ನಗದುರಹಿತ ವೈದ್ಯಕೀಯ ಸೌಲಭ್ಯ ಕಲ್ಪಿಸಲು ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ ಜಾರಿಗೆ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಗುರುವಾರ ನಡೆದ ಸಂಪುಟ ಸಭೆಯಲ್ಲಿ 2021 -22ನೇ ಸಾಲಿನ ಬಜೆಟ್ ನಲ್ಲಿ ಘೋಷಣೆಯಾಗಿ 2021 ರ ಜುಲೈ 22ರಂದು ಕ್ಯಾಬಿನೆಟ್ ಅನುಮೋದನೆ ಪಡೆದರೂ ಈ ಯೋಜನೆ ಅನೇಕ ಗೊಂದಲದಲ್ಲಿ ಸಿಲುಕಿ ಅನುಷ್ಠಾನವಾಗಿರಲಿಲ್ಲ. ಈಗ ಯೋಜನೆಯಲ್ಲಿ ಕೆಲವು ಮಾರ್ಪಾಟುಗಳೊಂದಿಗೆ ಜಾರಿಗೆ ಸಂಪುಟ ಸಭೆ ನಿರ್ಣಯ ಕೈಗೊಂಡಿದೆ.
ಸುವರ್ಣ ಆರೋಗ್ಯ ಟ್ರಸ್ಟ್, ಆರೋಗ್ಯ ಇಲಾಖೆ, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ, ನೌಕರ ಸಂಘಟನೆಗಳ ಅಭಿಪ್ರಾಯದೊಂದಿಗೆ ಸಮಗ್ರ ವರದಿ ಪಡೆದುಕೊಂಡು ತಾಂತ್ರಿಕ ಮತ್ತು ಹಣಕಾಸು ಸಂಬಂಧಿತ ಎಲ್ಲಾ ಗೊಂದಲಗಳಿಗೆ ಪರಿಹಾರ ಕಂಡುಕೊಳ್ಳಲಾಗಿದೆ. ನೌಕರರಿಗೆ ಅನುಕೂಲವಾಗುವಂತೆ ಆರೋಗ್ಯ ಸಂಜೀವಿನಿ ಯೋಜನೆಯನ್ನು ಜಾರಿಗೊಳಿಸಲಾಗುತ್ತಿದೆ.
ಯೋಜನೆ ಜಾರಿ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಸಚಿವ ಸಂಪುಟಕ್ಕೆ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ ಅಭಿನಂದನೆ ಸಲ್ಲಿಸಿದ್ದಾರೆ.