ಬೆಂಗಳೂರು: ಏಳನೇ ವೇತನ ಆಯೋಗದ ವರದಿಯನ್ನು ಯಥಾವತ್ತಾಗಿ ಜಾರಿಗೊಳಿಸಬೇಕು ಎಂಬುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಲಾಗಿದೆ.
ಮಂಗಳವಾರ ಸಿಎಂ ಭೇಟಿಯಾಗಿ ಏಳನೇ ವೇತನ ಆಯೋಗದ ವರದಿ ಸಲ್ಲಿಕೆಯಾಗಿ ಎರಡು ತಿಂಗಳಾದರೂ ಇದುವರೆಗೂ ಶಿಫಾರಸುಗಳು ಜಾರಿಯಾಗಿಲ್ಲ. ನೌಕರರ ಜೀವನ ಕಷ್ಟಕರವಾಗಿದ್ದು, ಆದಷ್ಟು ಬೇಗನೆ ವರದಿ ಜಾರಿ ಮಾಡಬೇಕು ಎಂದು ಮನವಿ ಮಾಡಿದ್ದಾರೆ.
ನೂತನ ಪಿಂಚಣಿ ಯೋಜನೆ ರದ್ದುಪಡಿಸಿ ಹಳೆಯ ಪಿಂಚಣಿ ಯೋಜನೆ ಮರು ಸ್ಥಾಪಿಸಲು ರಚಿಸಿರುವ ಸಮಿತಿಯ ವರದಿಯನ್ನು ಪಡೆದು ಹಳೆ ಪಿಂಚಣಿ ಯೋಜನೆ ಜಾರಿಗೊಳಿಸಬೇಕು ಎಂದು ಮನವಿ ಮಾಡಲಾಗಿದೆ.
ಮನವಿ ಸ್ವೀಕರಿಸಿದ ಮುಖ್ಯಮಂತ್ರಿಗಳು, ರಾಜ್ಯ ಸರ್ಕಾರ ನೌಕರರ ಪರವಾಗಿದೆ. ವೇತನ ಆಯೋಗದ ವರದಿಯ ಅನುಷ್ಟಾನದ ಬಗ್ಗೆ ಈಗಾಗಲೇ ಸಚಿವ ಸಂಪುಟದಲ್ಲಿ ಚರ್ಚಿಸಲಾಗಿದೆ. ಮುಂದಿನ ಸಭೆಯಲ್ಲಿ ಚರ್ಚಿಸಿ ವೇತನ, ಭತ್ಯೆ ಪರಿಷ್ಕರಿಸಲಾಗುವುದು ಎಂದು ಭರವಸೆ ನೀಡಿದ್ದಾರೆ ಎಂದು ಷಡಕ್ಷರಿ ತಿಳಿಸಿದ್ದಾರೆ.
ನಿಯೋಗದಲ್ಲಿ ಸಂಘದ ಪ್ರಧಾನ ಕಾರ್ಯದರ್ಶಿ ಟಿ. ಶ್ರೀನಿವಾಸ್, ಹಿರಿಯ ಉಪಾಧ್ಯಕ್ಷ ಎಂ.ವಿ. ರುದ್ರಪ್ಪ, ನಿವೃತ್ತ ನೌಕರರ ಸಂಘದ ಅಧ್ಯಕ್ಷ ಎಲ್. ಬೈರಪ್ಪ, ಸಚಿವಾಲಯ ನೌಕರರ ಸಂಘದ ಅಧ್ಯಕ್ಷ ರಮೇಶ ಸಂಗಾ ಮೊದಲಾದವರಿದ್ದರು.