
ಚಾಮರಾಜನಗರ: ರಾಜ್ಯ ಸರ್ಕಾರಿ ನೌಕರರಿಗೆ 7ನೇ ವೇತನ ಆಯೋಗದ ಶಿಫಾರಸುಗಳನ್ನು ಯಥಾವತ್ತಾಗಿ ಶೀಘ್ರವೇ ಜಾರಿಗೊಳಿಸಬೇಕು ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್. ಷಡಾಕ್ಷರಿ ಹಕ್ಕೊತ್ತಾಯ ಮಂಡಿಸಿದ್ದಾರೆ.
ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದ ನಾಗಮಲೆ ಭವನ ಆವರಣದಲ್ಲಿ ಶನಿವಾರ ರಾಜ್ಯ ಸರ್ಕಾರ ನೌಕರರ ಸಂಘದ ವತಿಯಿಂದ ಆಯೋಜಿಸಿದ್ದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಅವರು ಮಾತನಾಡಿದರು.
ಹೊಸ ಪಿಂಚಣಿ ಯೋಜನೆ ರದ್ದುಪಡಿಸಿ ಹಳೆ ಪಿಂಚಣಿ ಯೋಜನೆ ಮರು ಜಾರಿಗೊಳಿಸಬೇಕು. ರಾಜ್ಯ ಸರ್ಕಾರಿ ನೌಕರರು ಮತ್ತು ಅವರ ಅವಲಂಬಿತ ಕುಟುಂಬ ಸದಸ್ಯರಿಗೆ ನಗದು ರಹಿತ ಚಿಕಿತ್ಸೆ ನೀಡಲು ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯನ್ನು ಶೀಘ್ರವೇ ಜಾರಿಗೊಳಿಸಬೇಕು ಎಂದು ಒತ್ತಾಯಿಸಿದ್ದಾರೆ.