ತುಮಕೂರು: ಜನವರಿ 5ರಂದು ಮುಖ್ಯಮಂತ್ರಿಗಳೊಂದಿಗೆ ನಡೆಯಲಿರುವ ಸಭೆಯಲ್ಲಿ ಹಳೆ ಪಿಂಚಣಿ ಪದ್ಧತಿ ಜಾರಿಗೊಳಿಸುವ ಫಲಿತಾಂಶ ಹೊರಬೀಳಲಿದೆ ಎಂದು ರಾಜ್ಯ ಸರ್ಕಾರಿ ಎನ್.ಪಿ.ಎಸ್. ನೌಕರರ ಸಂಘದ ರಾಜ್ಯಾಧ್ಯಕ್ಷ ಶಾಂತರಾಮ ತೇಜ ತಿಳಿಸಿದ್ದಾರೆ.
ಕಳೆದ ಹತ್ತು ವರ್ಷಗಳಿಂದ ಒಪಿಎಸ್ ಜಾರಿಗೆ ಒತ್ತಾಯಿಸಿ ನಿರಂತರ ಹೋರಾಟ ನಡೆಸಲಾಗುತ್ತಿದೆ. 2022ರ ಡಿಸೆಂಬರ್ ನಿಂದ ಮಾಡು ಇಲ್ಲವೇ ಮಡಿ ಹೋರಾಟ ನಡೆಸುತ್ತಿದ್ದು, 2024ರ ಜನವರಿ 5ರಂದು ಮುಖ್ಯಮಂತ್ರಿಗಳೊಂದಿಗೆ ನಡೆಯುವ ಸಭೆಯಲ್ಲಿ ಫಲಿತಾಂಶ ಹೊರಬರಲಿದೆ ಎಂದು ನಗರ ಗ್ರಂಥಾಲಯ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ಎನ್.ಪಿ.ಎಸ್. ನೌಕರರ ಸಂಘದ ತುಮಕೂರು ಜಿಲ್ಲಾ ಘಟಕ ಆಯೋಜಿಸಿದ್ದ ಬೆಂಗಳೂರು ವಿಭಾಗೀಯ ಮಟ್ಟದ ಸಭೆ ಉದ್ಘಾಟಿಸಿ ಮಾತನಾಡಿದ ಅವರು ತಿಳಿಸಿದ್ದಾರೆ.
ಜನವರಿ 5ರಂದು ಸಂಜೆ 5 ಗಂಟೆಗೆ ಮುಖ್ಯಮಂತ್ರಿಗಳು ಎನ್‌ಪಿಎಸ್ ನೌಕರರು ಹಾಗೂ ಸಮಾನ ಮನಸ್ಕ ನೌಕರರ ಸಂಘಟನೆಗಳೊಂದಿಗೆ ಸಭೆ ನಡೆಸಲಿದ್ದಾರೆ. ಈ ಸಭೆಯಲ್ಲಿ ರಾಜ್ಯಮಟ್ಟದ ಸಮಾವೇಶ ದಿನಾಂಕ ಘೋಷಣೆಯಾಗಲಿದೆ. ಸಮಾವೇಶದ ದಿನದಂದು ಎನ್.ಪಿ.ಎಸ್. ರದ್ದುಗೊಳಿಸಿ ಒಪಿಎಸ್ ಜಾರಿ ಮಾಡುವ ಬಗ್ಗೆ ಮುಖ್ಯಮಂತ್ರಿಗಳು ಘೋಷಣೆ ಮಾಡಲಿದ್ದಾರೆ ಎಂದು ತಿಳಿಸಿದ್ದಾರೆ.