ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ 7ನೇ ವೇತನ ಆಯೋಗದ ಅಂತಿಮ ವರದಿ ಶಿಫಾರಸುಗಳ ಜಾರಿಗೆ ಬಗ್ಗೆ ಇಂದು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ನಿರ್ಣಯ ಕೈಗೊಳ್ಳುವ ಸಾಧ್ಯತೆ ಇದೆ.
ವಿಧಾನ ಮಂಡಲ ಉಭಯ ಸದನಗಳ ಅಧಿವೇಶನದ ಮೊದಲ ದಿನವಾದ ಇಂದು ಸಂಜೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಸಚಿವ ಸಂಪುಟ ಸಭೆ ನಿಗದಿಯಾಗಿದೆ. ಸಂಪುಟ ಸಭೆಯ ಕಾರ್ಯ ಸೂಚಿಯಲ್ಲಿ ಈ ವಿಷಯ ಸೇರ್ಪಡೆಯಾಗಿದೆ.
ವೇತನ ಆಯೋಗದ ಶಿಫಾರಸಿನಂತೆ ಸರ್ಕಾರಿ ನೌಕರರ ವೇತನ ಮತ್ತು ಭತ್ಯೆಗಳ ತೀರ್ಮಾನವನ್ನು ಸಂಪನ್ಮೂಲ ಕೊರತೆ ಕಾರಣಕ್ಕೆ ಹಣಕಾಸು ಇಲಾಖೆ ಸಲಹೆ ಆಧರಿಸಿ ಸರ್ಕಾರ ಮುಂದೂಡುತ್ತಾ ಬಂದಿದೆ. ಈ ತಿಂಗಳಾಂತ್ಯಕ್ಕೆ ಅನಿರ್ದಿಷ್ಟಾವಧಿ ಮುಷ್ಕರ ಕೈಗೊಳ್ಳಲು ಸರ್ಕಾರಿ ನೌಕರರು ಮುಂದಾಗಿದ್ದಾರೆ.
ಹೀಗಾಗಿ ಸಂಪುಟ ಸಭೆಯಲ್ಲಿ ವೇತನ ಆಯೋಗದ ಶಿಫಾರಸುಗಳ ಜಾರಿ ಬಗ್ಗೆ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ. ಶೇ. 27.5ರಷ್ಟು ವೇತನ ಪರಿಷ್ಕರಣೆಗೆ ಶಿಫಾರಸು ಮಾಡಿದೆ. 2023ರ ಮಾರ್ಚ್ ನಿಂದ ಶೇಕಡ 17ರಷ್ಟು ಮಧ್ಯಂತರ ಪರಿಹಾರ ನೀಡಲಾಗಿದ್ದು, ಇನ್ನೂ ಶೇಕಡ 10.5ರಷ್ಟು ವೇತನ ಹೆಚ್ಚಳ ಆಗಬೇಕಿದೆ. ಇದರಿಂದ ಸರ್ಕಾರಕ್ಕೆ ಸುಮಾರು 7500 ಕೋಟಿ ರೂ. ಹೆಚ್ಚುವರಿ ಹೊರೆಯಾಗುವ ನಿರೀಕ್ಷೆ ಇದೆ.