ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ಸಾರ್ವತ್ರಿಕ ವರ್ಗಾವಣೆಯ ಕುರಿತಾಗಿ ಗುರುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸುವ ಸಾಧ್ಯತೆ ಇದೆ.
ಸರ್ಕಾರಿ ನೌಕರರ ವರ್ಗಾವಣೆಗೆ ಸಂಬಂಧಿಸಿದಂತೆ ಶಾಸಕರಿಂದ ಒತ್ತಡ ಇದೆ. ವರ್ಗಾವಣೆಗೆ ಒಪ್ಪದಿದ್ದಲ್ಲಿ ಶಾಸಕರ ಅಸಮಾಧಾನಕ್ಕೆ ಕಾರಣವಾಗುತ್ತದೆ. ಹೀಗಾಗಿ ಸಣ್ಣ ಪ್ರಮಾಣದ ವರ್ಗಾವಣೆ ಪ್ರಕ್ರಿಯೆ ನಡೆಸುವ ಬಗ್ಗೆ ಚರ್ಚೆ ನಡೆದಿದೆ ಎಂದು ಹೇಳಲಾಗಿದೆ.
ಕಳೆದ ವರ್ಷ ಶೇ. 6 ಪ್ರಮಾಣದಲ್ಲಿ ವರ್ಗಾವಣೆ ಮಾಡಲಾಗಿತ್ತು. ಈ ವರ್ಷ ಇನ್ನೂ ಕಡಿಮೆ ಪ್ರಮಾಣದಲ್ಲಿ ವರ್ಗಾವಣೆ ಮಾಡುವ ಸಾಧ್ಯತೆ ಇದೆ. ಜೂನ್ ಅಂತ್ಯದೊಳಗೆ ವರ್ಗಾವಣೆ ಪ್ರಕ್ರಿಯೆ ಪೂರ್ಣಗೊಳಿಸಲು ಚಿಂತನೆ ನಡೆದಿದೆ. ಚುನಾವಣೆ ನೀತಿ ಸಂಹಿತೆ ಕಾರಣಕ್ಕೆ ಮೂರು ತಿಂಗಳು ಆಡಳಿತ ಯಂತ್ರ ಸಂಪೂರ್ಣ ಸ್ಥಗಿತವಾಗಿತ್ತು. ಈಗ ವರ್ಗಾವಣೆ ಕಾರಣಕ್ಕೆ ಮತ್ತಷ್ಟು ದಿನಗಳ ಕಾಲ ಸ್ಥಗಿತವಾದರೆ ಸಮಸ್ಯೆಯಾಗುತ್ತದೆ. ಹೀಗಾಗಿ ಸಣ್ಣ ಪ್ರಮಾಣದಲ್ಲಿ ಜೂನ್ ಅಂತ್ಯದೊಳಗೆ ವರ್ಗಾವಣೆ ಪ್ರಕ್ರಿಯೆ ನಡೆಸುವ ಚಿಂತನೆ ಇದ್ದು, ಗುರುವಾರದ ಸಂಪುಟ ಸಭೆಯಲ್ಲಿ ಚರ್ಚಿಸಿ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ ಎನ್ನಲಾಗಿದೆ.