ಬೆಂಗಳೂರು: ರಾಜೀವ್ ಗಾಂಧಿ ವಸತಿ ನಿಗಮದಿಂದ ಪಾಲುದಾರಿಕೆಯಲ್ಲಿ ಕೈಗೆಟುಕುವ ವಸತಿ ಯೋಜನೆ ಅಡಿಯಲ್ಲಿ 47,887 ಮನೆ ನಿರ್ಮಾಣ ಫಲಾನುಭವಿಗಳ ವಂತಿಗೆ ಸರ್ಕಾರದಿಂದಲೇ ಭರಿಸಲಾಗುವುದು.
ವಂತಿಗೆ ಮತ್ತು ಮೂಲ ಸೌಕರ್ಯ ವೆಚ್ಚದ 2213 ಕೋಟಿ ರೂ.ಗಳನ್ನು ಸರ್ಕಾರದಿಂದಲೇ ಭರಿಸುವ ಸಂಬಂಧ ಹಣಕಾಸು ಇಲಾಖೆಯಿಂದ ತಾತ್ವಿಕ ಒಪ್ಪಿಗೆ ದೊರೆತಿದೆ. ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆಗಾಗಿ ಪ್ರಸ್ತಾವನೆ ಮಂಡಿಸಲು ವಸತಿ ಇಲಾಖೆ ನಿರ್ಧಾರ ಕೈಗೊಂಡಿದೆ.
ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ನೇತೃತ್ವದಲ್ಲಿ ಕೊಳಗೇರಿ ಅಭಿವೃದ್ಧಿ ಮಂಡಳಿ ಮತ್ತು ರಾಜೀವ್ ಗಾಂಧಿ ವಸತಿ ನಿಗಮದಿಂದ ಬಡವರಿಗೆ ಮನೆ ಹಂಚಿಕೆ ಯೋಜನೆಗಳ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಹಣಕಾಸು ಇಲಾಖೆ ಹೆಚ್ಚುವರಿ ಅಧಿಕಾರಿಗಳ ಜೊತೆಗೆ ಸಭೆ ನಡೆಸಲಾಗಿದೆ.
ಸಭೆಯಲ್ಲಿ ರಾಜೀವ್ ಗಾಂಧಿ ವಸತಿ ನಿಗಮದಿಂದ ಪಾಲುದಾರಿಕೆಯಲ್ಲಿ ಕೈಗೆಟಕುವ ವಸತಿ ಯೋಜನೆ ಅಡಿ ಕೈಗೊಳ್ಳಲಾಗಿರುವ 47887 ಮನೆ ನಿರ್ಮಾಣಕ್ಕೆ ಫಲಾನುಭವಿಗಳ ವಂತಿಗೆ ಮತ್ತು ಮೂಲ ಸೌಕರ್ಯಕ್ಕಾಗಿ 2213 ಕೋಟಿ ರೂ. ಅವಶ್ಯಕತೆ ಇದ್ದು, ಅದನ್ನು ಸರ್ಕಾರದಿಂದಲೇ ಭರಿಸಲು ಹಣಕಾಸು ಇಲಾಖೆ ತಾತ್ವಿಕ ಒಪ್ಪಿಗೆ ನೀಡಿದೆ. ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ಪಡೆಯಲು ತೀರ್ಮಾನಿಸಲಾಗಿದೆ.
ಮುಂದಿನ ತಿಂಗಳು ಕೊಳಗೇರಿ ಅಭಿವೃದ್ಧಿ ಮಂಡಳಿಯಿಂದ ನಿರ್ಮಾಣ ಮಾಡುತ್ತಿರುವ 32,946 ಮನೆಗಳನ್ನು ಹಂಚಿಕೆ ಮಾಡಲಾಗುವುದು. ಮೂಲಸೌಕರ್ಯ ಮತ್ತು ಫಲಾನುಭವಿಗಳ ವಂತಿಗೆ ಮೊತ್ತ 862 ಕೋಟಿ ರೂ. ಬಿಡುಗಡೆಗೆ ಕೂಡಲೇ ಕ್ರಮ ಕೈಗೊಳ್ಳುವಂತೆ ಹಣಕಾಸು ಇಲಾಖೆ ಅಧಿಕಾರಿಗಳಿಗೆ ಸಚಿವ ಜಮೀರ್ ಅಹ್ಮದ್ ಖಾನ್ ಸೂಚನೆ ನೀಡಿದ್ದಾರೆ.