ಬೆಂಗಳೂರು: ಗ್ಯಾರಂಟಿ ಯೋಜನೆಗಳಿಗೆ ಆರ್ಥಿಕ ಸಂಪನ್ಮೂಲ ಸಂಗ್ರಹಕ್ಕೆ ಕಸರಸ್ತು ನಡೆಸುತ್ತಿರುವ ಸರ್ಕಾರ ದೇಶಿಯ ಮದ್ಯಗಳ ಬೆಲೆ ಹೆಚ್ಚಿಸಲು ಮುಂದಾಗಿದೆ.
ಆಂಧ್ರಪ್ರದೇಶ, ತಮಿಳುನಾಡು, ತೆಲಂಗಾಣ, ಮಹಾರಾಷ್ಟ್ರ, ಕೇರಳ ಸೇರಿದಂತೆ ಹೊರ ರಾಜ್ಯಗಳಿಗೆ ಹೋಲಿಸಿದಾಗ ಕರ್ನಾಟಕದಲ್ಲಿ ಹಲವು ಸ್ಲ್ಯಾಬ್ ಗಳ ಮದ್ಯಗಳ ದರ ತುಂಬಾ ಕಡಿಮೆಯಾಗಿದೆ. ಹೀಗಾಗಿ ಲೋಕಸಭೆ ಚುನಾವಣೆ ಫಲಿತಾಂಶದ ನಂತರ ಮದ್ಯದ ದರ ಏರಿಕೆ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
ರಾಜ್ಯದಲ್ಲಿ ಸೆಮಿ ಪ್ರೀಮಿಯಂ ಮತ್ತು ಪ್ರೀಮಿಯಂ ವಿದೇಶಿ ಮದ್ಯಕ್ಕೆ ಹೋಲಿಸಿದರೆ ಅಗ್ಗದ ಬೆಲೆಯ ಮದ್ಯಗಳ ಮಾರಾಟ ಹೆಚ್ಚಾಗಿದೆ. ಹೀಗಾಗಿ ಸರ್ಕಾರ ಮದ್ಯದ ಬೆಲೆ ಹೆಚ್ಚಳಕ್ಕೆ ಚಿಂತನೆ ನಡೆಸಿದೆ. ಅಬಕಾರಿ ಇಲಾಖೆಯಿಂದ ಸರ್ಕಾರಕ್ಕೆ ಹರಿದು ಬರುವ ಆದಾಯದಲ್ಲಿ ಅಗ್ಗದ ಬೆಲೆ ಮದ್ಯ ಹೆಚ್ಚಿನ ಪಾಲು ಹೊಂದಿವೆ. 2023ರ ಜುಲೈನಲ್ಲಿ ರಾಜ್ಯದಲ್ಲಿ ದೇಶಿಯ ಮದ್ಯಗಳ ಬೆಲೆ ಹೆಚ್ಚಳ ಮಾಡಲಾಗಿತ್ತು. ನಂತರ ಲಿಕ್ಕರ್ ಕಂಪನಿಗಳು ಬಿಯರ್ ದರ ಏರಿಕೆ ಮಾಡಿದ್ದವು.
ಜನಸಾಮಾನ್ಯರು ಬಳಸುವ ಲಿಕ್ಕರ್ ದರವನ್ನು 20 ರೂಪಾಯಿ ಹೆಚ್ಚಳ ಮಾಡಿದ್ದು, ಈಗ ಮತ್ತೆ ಲಿಕ್ಕರ್ ದರ ಏರಿಕೆಗೆ ಅಬಕಾರಿ ಇಲಾಖೆ ಪ್ಲಾನ್ ಮಾಡಿಕೊಂಡಿದೆ. ಲೋಕಸಭೆ ಚುನಾವಣೆ ಫಲಿತಾಂಶದ ನಂತರ ಸರ್ಕಾರ ಅನುಮೋದನೆ ನೀಡಲಿದೆ ಎಂದು ಹೇಳಲಾಗಿದೆ.
2023ರ ವಿಧಾನಸಭೆ ಚುನಾವಣೆಯ ನಂತರ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ ಮೂರು ಬಾರಿ ಬಿಯರ್ ದರ ಹೆಚ್ಚಳ ಮಾಡಿದೆ. ಇದಕ್ಕೆ ಮದ್ಯಪ್ರಿಯರಿಂದ ಆಕ್ರೋಶ ವ್ಯಕ್ತವಾಗಿದೆ.