
ಬೆಂಗಳೂರು: ಸರ್ಕಾರಿ ಶಾಲೆಗಳಲ್ಲಿ ಮೂಲಭೂತ ಸೌಲಭ್ಯ ಕಲ್ಪಿಸದ ಸರ್ಕಾರದ ಕ್ರಮಕ್ಕೆ ಹೈಕೋರ್ಟ್ ಛೀಮಾರಿ ಹಾಕಿದೆ. ರಾಜ್ಯ ಸರ್ಕಾರಕ್ಕೆ ಸರ್ಕಾರಿ ಶಾಲೆಗಳಲ್ಲಿ ಕನಿಷ್ಟ ಮೂಲಭೂತ ಸೌಲಭ್ಯದ ಕೊರತೆ ಇರುವುದೂ ಕಂಡು ಬಂದಿಲ್ಲವೇ? ಎಂದು ಪ್ರಶ್ನಿಸಿದೆ.
ಶಾಲೆಗಳಿಗೆ ಮೂಲಭೂತ ಸೌಲಭ್ಯ ಒದಗಿಸಲು 5 ವರ್ಷಗಳ ಯೋಜನೆ ಬೇಕೆ? 464 ಸರ್ಕಾರಿ ಶಾಲೆಗಳಲ್ಲಿ ಶೌಚಾಲಯಗಳಿಲ್ಲ. 36 ಸರ್ಕಾರಿ ಶಾಲೆಗಳಲ್ಲಿ ಕುಡಿಯುವ ನೀರಿನ ವ್ಯವಸ್ಥೆಯೇ ಇಲ್ಲ. ಬಡ ಮಕ್ಕಳಿಗೆ ಶಿಕ್ಷಣ ಪಡೆಯುವ ಅಧಿಕಾರವಿಲ್ಲವೇ? ಶ್ರೀಮಂತರ ಮಕ್ಕಳು ಮಾತ್ರ ಶಿಕ್ಷಣ ಪಡೆಯಬೇಕೆ? ಮೂಲಭೂತ ಸೌಲಭ್ಯದ ಕೊರತೆಯಿಂದಲೇ ಸರ್ಕಾರಿ ಶಾಲೆಗಳು ಮುಚ್ಚುತ್ತಿವೆ ಎಂದು ತರಾಟೆಗೆ ತೆಗೆದುಕೊಂಡಿದೆ.
ಇದರಿಂದ ಅನಿವಾರ್ಯವಾಗಿ ಖಾಸಗಿ ಶಾಲೆಗಳಿಗೆ ಮಕ್ಕಳನ್ನು ಕಳುಹಿಸಬೇಕಾದ ಸ್ಥಿತಿ ಇದೆ. ಸರ್ಕಾರಿ ಶಾಲೆ ಬದಲು ಖಾಸಗಿ ಶಾಲೆಗಳನ್ನು ಪ್ರೋತ್ಸಾಹಿಸುತ್ತಿದ್ದೀರಾ? ಹೀಗೆ ಮಾಡಿದರೆ ಹಣವಿಲ್ಲದ ಬಡವರು ತಮ್ಮ ಮಕ್ಕಳಿಗೆ ಶಿಕ್ಷಣ ಕೊಡುವುದಾದರೂ ಹೇಗೆ? ಎಂದು ಪ್ರಶ್ನಿಸಿದೆ.