ಬೆಂಗಳೂರು: ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಲು ಅನೇಕ ಕಡೆ ಹಣ ವಸೂಲಿ ಮಾಡುತ್ತಿರುವ ಬಗ್ಗೆ ಆರೋಪ ಕೇಳಿ ಬಂದಿವೆ.
ಪರವಾನಿಗೆ ಅಮಾನತು:
ಗೃಹಲಕ್ಷ್ಮಿ ಯೋಜನೆಯ ಅರ್ಜಿ ಸಲ್ಲಿಸಲು ಹಣ ವಸೂಲಿ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಕೊಡಗು ಜಿಲ್ಲೆ ಪೊನ್ನಂಪೇಟೆ ಗ್ರಾಮ ಒನ್ ಕೇಂದ್ರದ ಪರವಾನಗಿಯನ್ನು ಉಪ ವಿಭಾಗಾಧಿಕಾರಿ ಸತೀಶ್ ಉಲ್ಲಾಳ್ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ. ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಲು ಒಬ್ಬರಿಂದ 100 ರೂಪಾಯಿ ಪಡೆದ ಆರೋಪ ಕೇಳಿ ಬಂದಿತ್ತು. ಸಾರ್ವಜನಿಕರಿಂದ ವ್ಯಾಪಕ ದೂರು ಹಿನ್ನೆಲೆಯಲ್ಲಿ ಉಪ ವಿಭಾಗಾಧಿಕಾರಿ ಕ್ರಮ ಕೈಗೊಂಡಿದ್ದಾರೆ.
ಗ್ರಾಮ ಒನ್ ಕೇಂದ್ರದ ಸಿಬ್ಬಂದಿಗೆ ತರಾಟೆ:
ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಲು ಶಿಬರೂರು ಗ್ರಾಮ ಒನ್ ಕೇಂದ್ರದ ಸಿಬ್ಬಂದಿ ಹಣ ವಸೂಲಿ ಮಾಡುತ್ತಿರುವ ಆರೋಪ ಕೇಳಿ ಬಂದಿದೆ. ವಿಜಯಪುರ ಜಿಲ್ಲೆ ಬಬಲೇಶ್ವರ ತಾಲೂಕಿನ ಶಿಬರೂರು ಗ್ರಾಮದಲ್ಲಿ ಅರ್ಜಿ ಸಲ್ಲಿಸುವಾಗ 50 ರಿಂದ 100 ರೂಪಾಯಿ ವಸೂಲಿ ಮಾಡಲಾಗುತ್ತಿದೆ ಎಂಬ ಆರೋಪ ಕೇಳಿ ಬಂದಿದೆ.
ಗ್ರಾಮ ಒನ್ ಕೇಂದ್ರದ ಶ್ರೀಪತಿ ಮತ್ತು ಇತರರು ಹಣ ವಸೂಲಿ ಮಾಡುತ್ತಿದ್ದಾರೆ. ಹಣ ವಸೂಲಿ ಮಾಡುತ್ತಿರುವ ದೃಶ್ಯ ಸ್ಥಳೀಯರ ಮೊಬೈಲ್ ನಲ್ಲಿ ಸೆರೆಯಾಗಿದೆ. ಸಿಬ್ಬಂದಿಯನ್ನು ಗ್ರಾಮ ಪಂಚಾಯಿತಿ ಅಧ್ಯಕ್ಷ ರವಿಕುಮಾರ್ ಜಮಾದಾರ, ಸದಸ್ಯ ಭೀಮಪ್ಪ ತರಾಟೆಗೆ ತೆಗೆದುಕೊಂಡಿದ್ದಾರೆ.
ಗೃಹಲಕ್ಷ್ಮಿ ಯೋಜನೆ ಬಗ್ಗೆ ಮಾಹಿತಿ
ಗೃಹಲಕ್ಷ್ಮೀ ಯೋಜನೆ ಕರ್ನಾಟಕ ಸರ್ಕಾರದ ಪ್ರಮುಖ ಮಹಿಳಾ ಸಬಲೀಕರಣ ಯೋಜನೆಯಾಗಿದೆ. ಈ ಯೋಜನೆಯ ಮೂಲಕ ಪಡಿತರ ಕಾರ್ಡ್ ಹೊಂದಿದ ಕುಟುಂಬದ ಯಜಮಾನಿ ಖಾತೆಗೆ 2,000 ರೂ. ಜಮೆ ಮಾಡಲಾಗುತ್ತದೆ. ಗೃಹಲಕ್ಷ್ಮೀ ಯೋಜನೆಯು ಜುಲೈ 19 ರಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅಧಿಕೃತವಾಗಿ ಚಾಲನೆಗೊಂಡಿದೆ. ಪ್ರತಿ ಫಲಾನುಭವಿಯ ನೋಂದಣಿಗೆ ನಿಗದಿ ಮಾಡಿರುವ ದಿನಾಂಕ, ಸಮಯ ಮತ್ತು ಸ್ಥಳವನ್ನು 1902 ಗೆ ಕಾಲ್ ಮಾಡಿ ಅಥವಾ 8147500500 ನಂಬರಗೆ ಎಸ್‍ಎಂಎಸ್ ಮೂಲಕ ಸಂದೇಶ ಕಳುಹಿಸಿ ಮಾಹಿತಿ ಪಡೆಯಬಹುದು.
ಗ್ರಾಮಾಂತರ ಪ್ರದೇಶದಲ್ಲಿ ಗ್ರಾಮ ಒನ್ ಅಥವಾ ಬಾಪೂಜಿ ಸೇವಾ ಕೇಂದ್ರಗಳು ಮತ್ತು ನಗರ ಪ್ರದೇಶದಲ್ಲಿ ಕರ್ನಾಟಕ ಒನ್ ಕೇಂದ್ರಗಳು ಅರ್ಜಿ ಸಲ್ಲಿಸುವ ಕೇಂದ್ರಗಳಾಗಿರುತ್ತವೆ. ಅರ್ಜಿ ಸಲ್ಲಿಕೆಗೆ ಯಾವುದೇ ಶುಲ್ಕವನ್ನು ಪಾವತಿಸತಕ್ಕದ್ದಲ್ಲ ಹಾಗೂ ಯೋಜನೆ ನೋಂದಣಿ ಸಂಪೂರ್ಣ ಉಚಿತವಾಗಿರುತ್ತದೆ. ಅರ್ಜಿದಾರರು ಮಧ್ಯವರ್ತಿಗಳ ಮೇಲೆ ಅಂವಲಂಬಿತರಾಗದೇ ಅರ್ಜಿಯನ್ನು ಸ್ವತಃ ಕೇಂದ್ರಗಳಲ್ಲಿ ಸಲ್ಲಿಸಬಹುದಾಗಿದೆ. ಕುಟುಂಬದ ಯಜಮಾನಿಗೆ ನೊಂದಣಿ ದಿನಾಂಕ, ಸಮಯ ಮತ್ತು ಸ್ಥಳದ ವಿವರವನ್ನು ಎಸ್‍ಎಂಎಸ್ ಮೂಲಕ ತಿಳಿಸಲಾಗುವುದು. ಈ ಯೋಜನೆಯ ನೋಂದಣಿಗೆ ಯಾವುದೇ ಅಂತಿಮ ದಿನಾಂಕ ಮತ್ತು ಸಮಯವನ್ನು ಸರ್ಕಾರ ನಿಗದಿಪಡಿಸಿರುವುದಿಲ್ಲ.