ಬೆಂಗಳೂರು: ಅಭಿವೃದ್ಧಿ ಕಾರ್ಯಗಳಿಗಾಗಿ ಸಂಪನ್ಮೂಲ ಸಂಗ್ರಹಕ್ಕೆ ಗ್ರಾಮ ಪಂಚಾಯಿತಿಗಳ ಅಸ್ತಿ ತೆರಿಗೆ ಸಂಗ್ರಹ ಪ್ರಕ್ರಿಯೆ ಚುರುಕುಗೊಳಿಸುವಂತೆ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ರಾಜ್ಯದ ಎಲ್ಲಾ ಜಿಲ್ಲಾ ಪಂಚಾಯಿತಿ ಸಿಇಒಗಳೊಂದಿಗೆ ವಿಡಿಯೋ ಸಂವಾದ ನಡೆಸಿದ ಅವರು, ಪಂಚಾಯಿತಿಗಳ ಅಭಿವೃದ್ಧಿ ದೃಷ್ಟಿಯಿಂದ ಗ್ರಾಮ ಪಂಚಾಯತಿಗಳ ತೆರಿಗೆಯನ್ನು ಸಮರ್ಪಕವಾಗಿ ಸಂಗ್ರಹಿಸುವ ಅನಿವಾರ್ಯತೆ ಇದ್ದು, ಇದಕ್ಕಾಗಿ ತೆರಿಗೆ ಸಂಗ್ರಹ ಕಾರ್ಯಕ್ಷಮತೆಯನ್ನು ಹೆಚ್ಚಿಸಲು ತಿಂಗಳಿಗೊಮ್ಮೆ ಸಭೆ ನಡೆಸುವಂತೆ ಸೂಚನೆ ನೀಡಿದ್ದಾರೆ.
ಗ್ರಾಮ ಸಭೆಗಳನ್ನು ನಡೆಸಲು ಕೆಲವು ಪಂಚಾಯಿತಿಗಳು ನಿರಾಸಕ್ತಿ ವಹಿಸಿದ ಬಗ್ಗೆ ಸಚಿವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸೋಶಿಯಲ್ ಆಡಿಟ್ ಆಗದೆ ಅನುದಾನ ನಿರೀಕ್ಷೆ ಸಾಧ್ಯವಿಲ್ಲ. ಇದರಿಂದ ಗ್ರಾಮಗಳ ಅಭಿವೃದ್ಧಿಗೆ ಹಿನ್ನಡೆ ಆಗುತ್ತದೆ. ಎಲ್ಲಾ ಕಡೆಗಳಲ್ಲಿಯೂ ಕಡ್ಡಾಯವಾಗಿ ಗ್ರಾಮ ಸಭೆ ನಡೆಸಲು ನಿರ್ದೇಶನ ನೀಡುವಂತೆ ತಿಳಿಸಿದ್ದಾರೆ.
ಜಲಜೀವನ್ ಮಿಷನ್ ಕಾರ್ಯಕ್ರಮದಲ್ಲಿ ನಡೆಯುತ್ತಿರುವ ಕಾಮಗಾರಿಗಳಲ್ಲಿ ಗುಣಮಟ್ಟ ಕಾಯ್ದುಕೊಳ್ಳಬೇಕು. ಕಳಪೆ ಸಾಮಗ್ರಿ ಬಳಕೆ ಮಾಡಬಾರದು. ಗ್ರಾಮೀಣ ಜನರ ಮನೆಗೆ ನೀರು ತಲುಪಿಸುವ ಯೋಜನೆಯಡಿ ಸರ್ಕಾರದ ಹಣ ಸಮರ್ಪಕವಾಗಿ ಬಳಕೆಯಾಗುವಂತೆ ಕ್ರಮ ವಹಿಸಬೇಕು. ಇಲ್ಲದಿದ್ದಲ್ಲಿ ಅಧಿಕಾರಿಗಳನ್ನು ಹೊಣೆ ಮಾಡುವುದಾಗಿ ಎಚ್ಚರಿಕೆ ನೀಡಿದ್ದಾರೆ.