ರಾಮನಗರ: ಪ್ರತಿ ಗ್ರಾಮಪಂಚಾಯಿತಿಗಳಿಗೆ ವಾರ್ಷಿಕ 1.5 ಕೋಟಿ ರೂಪಾಯಿ ಅನುದಾನ ನೇರವಾಗಿ ಬಿಡುಗಡೆ ಮಾಡಲಾಗುವುದು ಎಂದು ಉಪಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥನಾರಾಯಣ ತಿಳಿಸಿದ್ದಾರೆ.
ರಾಮನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಆಡಳಿತ ವಿಕೇಂದ್ರೀಕರಣವನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಪ್ರತಿ ಗ್ರಾಮ ಪಂಚಾಯಿತಿಗೆ ವಾರ್ಷಿಕ 1.5 ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಲಾಗುತ್ತದೆ. 15 ನೇ ಹಣಕಾಸು ಆಯೋಗದ ವರದಿಯಲ್ಲಿ ಗ್ರಾಮಪಂಚಾಯಿತಿಗಳಿಗೆ ನೇರವಾಗಿ ಹೆಚ್ಚು ಅನುದಾನ ನೀಡುವ ಪ್ರಸ್ತಾಪವಿದೆ. ಗ್ರಾಮೀಣಾಭಿವೃದ್ಧಿಗೆ ಅಗತ್ಯವಾದ ಎಲ್ಲಾ ಹಣಕಾಸು ಒದಗಿಸಲಾಗುವುದು ಎಂದು ಹೇಳಿದ್ದಾರೆ.
ಗ್ರಾಮಗಳ ಯೋಜನೆ ಅನುಷ್ಠಾನದ ಹೊಣೆಯನ್ನು ಗ್ರಾಮಪಂಚಾಯಿತಿಗಳಿಗೆ ವಹಿಸಲಾಗುತ್ತದೆ. ನರೇಗಾ ಯೋಜನೆ ಅನುಷ್ಠಾನದ ಹೊಣೆಯನ್ನು ಗ್ರಾಮ ಪಂಚಾಯಿತಿಗೆ ವಹಿಸಲಿದ್ದು, ಆದರ್ಶ ಗ್ರಾಮಗಳನ್ನು ನಿರ್ಮಾಣ ಮಾಡಲಾಗುವುದು. ರಸ್ತೆ, ಶೌಚಾಲಯ, ಆರೋಗ್ಯ, ಶಿಕ್ಷಣ ಸೇರಿದಂತೆ ಅಗತ್ಯ ಮೂಲ ಸೌಕರ್ಯ ಒದಗಿಸಲಾಗುವುದು ಎಂದು ಹೇಳಲಾಗಿದೆ.