ಬೆಂಗಳೂರು: ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯಾದ್ಯಂತ ಗ್ರಾಮ ಪಂಚಾಯಿತಿಗಳ ಎಲ್ಲಾ ವೃಂದದ ನೌಕರರು ಅ. 4 ರಂದು ತಮ್ಮ ಸೇವೆ ಸ್ಥಗಿತಗೊಳಿಸಿ ಸ್ವಾತಂತ್ರ್ಯ ಉದ್ಯಾನದಲ್ಲಿ ಅನಿರ್ದಿಷ್ಟ ಹೋರಾಟಕ್ಕೆ ಸಜ್ಜಾಗಿದ್ದಾರೆ.
ಆಡಳಿತ ವರ್ಗ ಕಾರ್ಯ ನಿರ್ವಹಣೆಯಲ್ಲಿ ಎದುರಿಸುತ್ತಿರುವ ಅನೇಕ ಸಮಸ್ಯೆಗಳನ್ನು ಬಗೆಹರಿಸುವಂತೆ ರಾಜ್ಯ ಸರ್ಕಾರ ಮತ್ತು ಪಂಚಾಯತ್ ರಾಜ್ ಇಲಾಖೆಗೆ ಅನೇಕ ವರ್ಷಗಳಿಂದ ಮನವಿ ಮಾಡಿದ್ದರೂ ಸ್ಪಂದಿಸಿಲ್ಲ. ಈ ಧೋರಣೆಯನ್ನು ಖಂಡಿಸಿದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಎಲ್ಲಾ ವೃಂದ ಸಂಘಗಳು ಮತ್ತು ಗ್ರಾಪಂ ಸದಸ್ಯರ ಒಕ್ಕೂಟಗಳು ಅನಿರ್ದಿಷ್ಟಾವಧಿ ಹೋರಾಟಕ್ಕೆ ಕರೆ ನೀಡಿವೆ.
ಹೋರಾಟದಲ್ಲಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಕಾರ್ಯದರ್ಶಿಗಳು, ಎಸ್‌ಡಿಎ, ಬಿಲ್ ಕಲೆಕ್ಟರ್, ಡಾಟಾ ಎಂಟ್ರಿ ಆಪರೇಟರ್, ಜವಾನರು, ನೀರು ನಿಯಂತ್ರಕರು ಭಾಗವಹಿಸಲಿದ್ದಾರೆ.