ಬೆಳಗಾವಿ : ರಾಜ್ಯ ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ಭರ್ಜರಿ ಸಿಹಿಸುದ್ದಿ ಸಿಕ್ಕಿದ್ದು, ಮುಂದಿನ ವರ್ಷದಿಂದ 8 ನೇ ತರಗತಿ ವಿದ್ಯಾರ್ಥಿಗಳಿಗೆ ಸೈಕಲ್ ವಿತರಿಸಲು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.
ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಯುತ್ತಿರುವ ಅಧಿವೇಶನದಲ್ಲಿ ಶಾಸಕ ಪ್ರದೀಪ್ ಈಶ್ವರ್ ಅವರು ಸರ್ಕಾರಿ ಶಾಲೆಯ 8 ನೇ ತರಗತಿ ಮಕ್ಕಳಿಗೆ ಸೈಕಲ್ ವಿತರಿಸಲು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು. ಪ್ರದೀಪ್ ಈಶ್ವರ್ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ ‘ಮುಂದಿನ ಬಜೆಟ್ ನಲ್ಲಿ ಸೈಕಲ್ ವಿತರಣೆ ಮಾಡಲು ಕ್ರಮ ವಹಿಸುತ್ತೇನೆ, ಮುಂದಿನ ವರ್ಷದಿಂದ ಮಕ್ಕಳಿಗೆ ಸೈಕಲ್ ವಿತರಿಸುವ ಬಗ್ಗೆ ಕ್ರಮ ವಹಿಸುತ್ತೇವೆ, ಈ ಬಗ್ಗೆ ಮುಖ್ಯಮಂತ್ರಿಗಳ ಜೊತೆ ಚರ್ಚಿಸಿ ಕ್ರಮ ಕೈಗೊಳ್ಳುತ್ತೇನೆ’ ಎಂದು ಹೇಳಿದರು.
ಬಿ. ಎಸ್. ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದ ಕಾಲದಲ್ಲಿ 2006-07ರಲ್ಲಿ ಶಾಲಾ ಮಕ್ಕಳಿಗೆ ಸೈಕಲ್ ವಿತರಿಸುವ ಯೋಜನೆಯನ್ನು ಜಾರಿಗೆ ತರಲಾಗಿತ್ತು. ದೂರದ ಗ್ರಾಮೀಣ ಪ್ರದೇಶದಿಂದ ಬರುವ ಮಕ್ಕಳಿಗೆ ಅನುಕೂಲವಾಗಲೆಂದು ಸರ್ಕಾರ ಈ ಕ್ರಮ ಕೈಗೊಂಡಿತ್ತು. ನಂತರ ಈ ಯೋಜನೆ ಸ್ಥಗಿತಗೊಂಡಿತ್ತು. ಮತ್ತೆ ಮಕ್ಕಳಿಗೆ ಸೈಕಲ್ ವಿತರಿಸುವ ಯೋಜನೆ ಜಾರಿಗೆ ತರುವಂತೆ ಆಗ್ರಹ ವ್ಯಕ್ತವಾಗಿದೆ.