ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿಗೆ ಹೊಸ ರೂಪ, ವ್ಯಾಪ್ತಿ ನೀಡಲು ರಾಜ್ಯ ಸರ್ಕಾರ ಸಿದ್ಧತೆ ನಡೆಸಿದೆ. ಈ ನಿಟ್ಟಿನಲ್ಲಿ ಗ್ರೇಟರ್ ಬೆಂಗಳೂರು ಅಥಾರಿಟಿ ಸ್ಥಾಪಿಸಲು ಸರ್ಕಾರ ಚಿಂತನೆ ನಡೆಸಿದೆ.
ಗ್ರೇಟರ್ ಬೆಂಗಳೂರು ಅಥಾರಿಟಿ ಸ್ಥಾಪನೆಗಾಗಿ ಸರ್ಕಾರದ ಮಟ್ಟದಲ್ಲಿ ಚರ್ಚೆ ನಡೆಯುತ್ತಿದ್ದು, ರಾಮನಗರ, ಕನಕಪುರವನ್ನು ಬೆಂಗಳೂರಿಗೆ ಸೇರಿಸಲು ಪ್ರಯತ್ನಿಸಲಾಗುತ್ತಿದೆ. ಬಿಬಿಎಂಪಿಯನ್ನು ಐದು ಭಾಗಗಳಾಗಿ ವಿಂಗಡಿಸಿ ಹೊಸದಾಗಿ ವಾರ್ಡ್ ಗಳನ್ನು ಸೇರಿಸಿ ವಿಸ್ತರಣೆ ಮಾಡಲು ಯೋಜನೆ ರೂಪಿಸಲಾಗಿದೆ ಎಂದು ತಿಳಿದುಬಂದಿದೆ.
ಸುಮಾರು 400 ವಾರ್ಡ್ ಗಳು ಗ್ರೇಟರ್ ಬೆಂಗಳೂರು ಅಥಾರಿಟಿ ವ್ಯಾಪ್ತಿಗೆ ಬರುವ ಸಾಧ್ಯತೆ ಇದೆ ಎನ್ನಲಾಗಿದೆ. ಈ ಬಗ್ಗೆ ಈಗಾಗಲೇ ಡಿಸಿಎಂ ಡಿ.ಕೆ.ಶಿವಕುಮಾರ್ ಅಧಿಕಾರಿಗಳ ಜೊತೆ ಚರ್ಚೆ ನಡೆಸಿದ್ದಾರೆ.
ಬೆಂಗಳೂರಿನ ಸುತ್ತಮುತ್ತಲಿನ ಹಲವು ಪ್ರದೇಶಗಳು ಸೇರಿ 400 ವಾರ್ಡ್ ಗಳ ರಚನೆ
ಬೆಂಗಳೂರು ಕೇಂದ್ರ, ಬೆಂಗಳೂರು ಉತ್ತರ, ಪೂರ್ವ, ಪಶ್ಚಿಮ, ದಕ್ಷಿಣ ಎಂದು ಐದು ಪಾಲಿಕೆಗಳ ರಚನೆ
ಬಿಬಿಎಂಪಿಯಲ್ಲಿ ಮೂರು ಹಂತದ ಆಡಳಿತ ವ್ಯವಸ್ಥೆ ಜಾರಿ. ಇವುಗಳ ಮೇಲೆ ಗ್ರೇಟರ್ ಬೆಂಗಳೂರು ಪ್ರಾಧಿಕಾರ ರಚನೆಗೆ ಸಲಹೆ
ಬೆಂಗಳೂರಿನ ಸುತ್ತಲಿನ ನಗರಗಳು-ನೆಲಮಂಗಲ, ಹೊಸಕೋಟೆ, ಬಿಡದಿ, ರಾಮನಗರ, ಕನಕಪುರ, ದೇವನಹಳ್ಳಿ ಸೇರಿ, ಬೆಂಗಳೂರು ಗ್ರಾಮಾಂತರ ಬಿಬಿಎಂಪಿ ವ್ಯಾಪ್ತಿಗೆ ಸೇರಿಸಲು ಅಧಿಕಾರಿಗಳು ಸಲಹೆ ನೀಡಿದ್ದಾರೆ ಎನ್ನಲಾಗಿದೆ.