ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಯಾದ ಮಹಿಳೆಯರಿಗೆ 2,000 ರೂ. ಆರ್ಥಿಕ ನೆರವು ನೀಡುವ ಗೃಹಲಕ್ಷ್ಮೀ ಯೋಜನೆಗೆ ಆಗಸ್ಟ್ 30 ರಂದು ಮೈಸೂರಿನಲ್ಲಿ ಚಾಲನೆ ನೀಡಲು ರಾಜ್ಯ ಸರ್ಕಾರ ಸಿದ್ಧತೆ ನಡೆಸಿದೆ.
ಈ ಬಗ್ಗೆ ಮಾಹಿತಿ ನೀಡಿರುವ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಅವರು,ಮುಖ್ಯಮಂತ್ರಿಗಳು ಮತ್ತು ಉಪಮುಖ್ಯಮಂತ್ರಿಗಳು ಬೆಳಗಾವಿಯಲ್ಲಿ ಗೃಹಲಕ್ಷ್ಮಿ ಯೋಜನೆಗೆ ಚಾಲನೆ ನೀಡಬೇಕಿದ್ದ ಕಾರ್ಯಕ್ರಮದ ಸ್ಥಳವನ್ನು ಪರಿಶೀಲನೆ ಕೂಡ ಮಾಡಿದ್ದರು. ಆದರೆ ರಾಹುಲ್ ಗಾಂಧಿ ಮತ್ತು ಮಲ್ಲಿಕಾರ್ಜುನ ಖರ್ಗೆಯವರ ದಿನಾಂಕ ಹೊಂದಾಣಿಕೆ ಆಗುತ್ತಿರಲಿಲ್ಲ. ಹೀಗಾಗಿ ಮೈಸೂರಿನಲ್ಲಿ ಆಗಸ್ಟ್ 30ರಂದು ಗೃಹಲಕ್ಷ್ಮಿ ಯೋಜನೆಗೆ ಚಾಲನೆ ನೀಡಲಾಗುವುದು ಎಂದು ತಿಳಿಸಿದ್ದಾರೆ.
ನನ್ನನ್ನು ಕೇವಲ ಬೆಳಗಾವಿಗೆ ಮಾತ್ರ ಸೀಮಿತ ಮಾಡಬೇಡಿ. ಸಿಎಂ ತವರು ಜಿಲ್ಲೆ ಮೈಸೂರಿನಲ್ಲಿ ಕಾರ್ಯಕ್ರಮ ಮಾಡುವ ಅವಕಾಶ ಸಿಕ್ಕಿದೆ. ಕಾಂಗ್ರೆಸ್ ಪಕ್ಷದಲ್ಲಿ ಯಾರೂ ವರ್ಚಸ್ಸು ತೋರಿಸುವ ಅಗತ್ಯವಿಲ್ಲ. ಬೆಳಗಾವಿಯಲ್ಲಿ ಕಾರ್ಯಕ್ರಮ ಮಾಡಿದರೂ ಖಾತೆಗೆ 2000 ರೂ. ಜಮಾ ಮಾಡಲಾಗುತ್ತದೆ. ಮೈಸೂರಿನಲ್ಲಿ ಕಾರ್ಯಕ್ರಮ ಮಾಡಿದರೂ ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳ ಖಾತೆಗೆ ಹಣ ಸಂದಾಯವಾಗಲಿದೆ ಎಂದು ತಿಳಿಸಿದ್ದಾರೆ.
ಇಂದು ಗೃಹಲಕ್ಷ್ಮೀ ಯೋಜನೆ ಚಾಲನೆ ಕಾರ್ಯಕ್ರಮವನ್ನು ಆಯೋಜಿಸಲು ಸ್ಥಳ ಪರಿಶೀಲನೆಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮೈಸೂರಿಗೆ ತೆರಳಲಿದ್ದು, ಬಳಿಕ ಯಾವ ಸ್ಥಳದಲ್ಲೇ ಗೃಹಲಕ್ಷ್ಮೀ ಚಾಲನೆ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಲಿದ್ದಾರೆ ಎನ್ನಲಾಗಿದೆ.