ಬೆಂಗಳೂರು: ಗೃಹಲಕ್ಷ್ಮಿ ಯೋಜನೆಗೆ ಆಧಾರ್ ಕಡ್ಡಾಯವಲ್ಲ, ಮನೆಯ ಯಜಮಾನಿ ಬ್ಯಾಂಕ್ ಖಾತೆಗೆ ಆಧಾರ್ ಜೋಡಣೆ ಆಗಿರದಿದ್ದರೂ ಗೃಹಲಕ್ಷ್ಮಿ ಯೋಜನೆಯಡಿ ಮಾಸಿಕ 2,000 ರೂ. ನೆರವು ನೀಡಲು ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ.
ಗುರುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಗೃಹಲಕ್ಷ್ಮಿ ಯೋಜನೆ ವ್ಯಾಪ್ತಿಗೆ ಬರುವ ಸುಮಾರು 22 ಲಕ್ಷ ಮಹಿಳೆಯರ ಬ್ಯಾಂಕ್ ಖಾತೆಗೆ ಆಧಾರ್ ಜೋಡಣೆ ಆಗದ ಮಾಹಿತಿ ಗೊತ್ತಾಗಿದೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗೆ ಈ ಮಾಹಿತಿ ಗೊತ್ತಾಗಿದ್ದು, ಸಭೆಯಲ್ಲಿ ಚರ್ಚೆ ನಡೆದು ಆಧಾರ್ ಜೋಡಣೆಯಾಗದ ಮಹಿಳೆಯರಿಗೂ ಗೃಹಲಕ್ಷ್ಮಿ ಯೋಜನೆ ಸೌಲಭ್ಯ ಕಲ್ಪಿಸುವ ಪ್ರಸ್ತಾಪಕ್ಕೆ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ ಎಂದು ಹೇಳಲಾಗಿದೆ.