ವಿಜಯನಗರ: ರಾಜ್ಯ ಕಾಂಗ್ರೆಸ್ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಬಗ್ಗೆ ಕಾಂಗ್ರೆಸ್ ಶಾಸಕರೇ ಅಪಸ್ವರ ಎತ್ತುತ್ತಿದ್ದಾರೆ. ಕೆಲ ಗ್ಯಾರಂಟಿ ಯೋಜನೆಗಳನ್ನು ರದ್ದು ಮಾಡುವಂತೆ ಕಾಂಗ್ರೆಸ್ ಶಾಸಕ ಗವಿಯಪ್ಪ ಒತ್ತಾಯಿಸಿದ್ದಾರೆ.
ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಮಾತನಾಡಿದ ಶಾಸಕ ಗವಿಯಪ್ಪ, ಐದು ಗ್ಯಾರಂಟಿ ಯೋಜನೆಗಳಲ್ಲಿ ಎರಡನ್ನು ಕೈಬಿಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಮಾಡುತ್ತೇನೆ ಎಂದಿದ್ದಾರೆ.
ಗ್ಯಾರಂಟಿಗಳಿಂದ ಆಶ್ರಯ ಮನೆಗಳು ಬರುತ್ತಿಲ್ಲ. ಶಕ್ತಿ ಯೋಜನೆ ಸೇರಿದಂತೆ ಎರಡು ಗ್ಯಾರಂಟಿ ಯೋಜನೆಗಳನ್ನು ಕಡಿಮೆ ಮಾಡಲು ಮುಖ್ಯಮಂತ್ರಿಗಳಿಗೆ ಹೇಳುತ್ತೇನೆ. ಅವರೇನು ತೀರ್ಮಾನ ಮಾಡ್ತಾರೆ ನೋಡೋಣ ಎಂದಿದ್ದಾರೆ.
ನಮ್ಮ ಕ್ಷೇತ್ರಕ್ಕೆ ಸರ್ಕಾರದಿಂದ ಯಾವುದೇ ಅನುದಾನ ಬರುತ್ತಿಲ್ಲ. ಅನುದಾನ ಬಿಡುಗಡೆ ಮಾಡುವಂತೆ ಮನವಿ ಮಾಡುವುದಾಗಿ ಹೇಳಿದ್ದಾರೆ. ಗ್ಯಾರಂಟಿ ಯೋಜನೆಗಳನ್ನು ಸಮರ್ಪಕವಾಗಿ ಜಾರಿ ಮಾಡಲು ಸರ್ಕಾರದ ಬಳಿ ಹಣವಿಲ್ಲ ಎಂದು ವಿಪಕ್ಷಗಳು ಆರೋಪ ಮಾಡುತ್ತಿರುವ ಹೊತ್ತಲ್ಲೇ ಕಾಂಗ್ರೆಸ್ ಶಾಸಕರ ಈ ಹೇಳಿಕೆ ಚರ್ಚೆಗೆ ಕಾರಣವಗಿದೆ.