ಉಡುಪಿ: ರಾಜ್ಯ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಐದು ಗ್ಯಾರಂಟಿ ಯೋಜನೆಗಳು ಸ್ಥಗಿತಗೊಳ್ಳಲಿವೆಯೇ? ಎಂಬ ಚರ್ಚೆ ಆರಂಭವಾಗಿದ್ದು, ಈ ಬಗ್ಗೆ ಇದೀಗ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ಪಷ್ಟನೆ ನೀಡಿದ್ದಾರೆ. ಪಂಚ ಗ್ಯಾರಂಟಿ ಯೋಜನೆಗಳು ಬಡ ಜನರ ಹಸಿವನ್ನು ನೀಗಿಸುತ್ತಿದೆ. ಈ ಯೋಜನೆಗಳು ಯಥಾವತ್ತಾಗಿ ಮುಂದುವರಿಯಲಿವೆ ಎಂದು ತಿಳಿಸಿದರು.
ಉಡುಪಿ ಜಿಲ್ಲೆಯ ಅಜ್ಜರನಾಡಿನಲ್ಲಿರುವ ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆಯ ಸಮಾರಂಭದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಗ್ಯಾರಂಟಿ ಯೋಜನೆಗಳನ್ನು ಪರಿಷ್ಕರಿಸುವ ಪ್ರಸ್ತಾಪ ಸರ್ಕಾರದ ಮುಂದಿಲ್ಲ. ಸರ್ಕಾರ ಗ್ಯಾರಂಟಿ ಯೋಜನೆಗಳಿಗೆ ಕತ್ತರಿ ಹಾಕುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ವಿಧಾನಸಭಾ ಚುನಾವಣೆ ವೇಳೆ ನಾವು ಕೊಟ್ಟ ಭರವಸೆಗಳಂತೆ ಗೃಹಲಕ್ಷ್ಮೀ ಸೇರಿದಂತೆ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದೇವೆ. ಐದು ಗ್ಯಾರಂಟಿಗಳು ಮುಂದುವರಿಯಲಿವೆ. ಯಾರೂ ಕೂಡ ಈ ಯೋಜನೆಗಳ ಬಗ್ಗೆ ಅನ್ಯತಾ ವ್ಯಾಖ್ಯಾನಿಸಬಾರದು. ಪರಿಷ್ಕರಣೆ ಬಗ್ಗೆ ಸಚಿವ ಸತೀಶ್ ಜಾರಕಿಹೊಳಿಯವರು ಮಾತನಾಡಿರಲಿಕ್ಕಿಲ್ಲ. ಸಚಿವ ಸಂಪುಟ ಸಭೆಯಲ್ಲಿ ಎಲ್ಲರ ಧ್ವನಿಯೂ ಒಂದೇ, ಗ್ಯಾರಂಟಿ ಯೋಜನೆ ಮುಂದುವರಿಯಬೇಕು ಎಂಬುದು. ಮಹಿಳೆಯರ ಸಬಲೀಕರಣ ಬಡವರ ಉದ್ದಾರ ನಮ್ಮ ಉದ್ದೇಶ. ಇವತ್ತಿನವರೆಗೆ ಇರುವ ಮಾನದಂಡದಲ್ಲೇ ಯೋಜನೆಗಳು ಮುಂದುವರಿಯುತ್ತವೆ ಎಂದರು.