ಬೆಳಗಾವಿ(ಸುವರ್ಣಸೌಧ): ರಾಜ್ಯದ ಸರ್ಕಾರಿ ಪದವಿ ಕಾಲೇಜುಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರ ಖಾಯಂ ಮಾಡುವ ಕುರಿತಂತೆ ಸರ್ಕಾರದಿಂದ ಉನ್ನತ ಅಧಿಕಾರಿಗಳ ಸಮಿತಿಯನ್ನು ರಚನೆ ಮಾಡಲಾಗಿದೆ. ಈ ಸಮಿತಿ ವರದಿ ಬಂದ ನಂತರ ಕ್ರಮ ಕೈಗೊಳ್ಳಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಹೇಳಿದ್ದಾರೆ.
ವಿಧಾನಸಭೆಯಲ್ಲಿ ವಿಪಕ್ಷನಾಯಕ ಸಿದ್ದರಾಮಯ್ಯ, ದೆಹಲಿ ಸರ್ಕಾರದ ಮಾದರಿಯಲ್ಲಿ ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿನ ಅರೆಕಾಲಿಕ ಉಪನ್ಯಾಸಕರನ್ನು ಖಾಯಂ ಮಾಡಬೇಕು, ವೇತನ ಹೆಚ್ಚಳ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.
ಈ ವೇಳೆ ಮಾತನಾಡಿದ ಸಚಿವ ಅಶ್ವತ್ಥನಾರಾಯಣ, ರಾಜ್ಯದ 430 ಸರ್ಕಾರಿ ಪದವಿ ಕಾಲೇಜುಗಳಲ್ಲಿ 14,564 ಜನ ಅತಿಥಿ ಉಪನ್ಯಾಸಕರು ಕಾರ್ಯನಿರ್ವಹಿಸುತ್ತಿದ್ದಾರೆ. ಕಾರ್ಯಭಾರ ಆಧರಿಸಿ ಅತಿಥಿ ಉಪನ್ಯಾಸಕರ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಅವರ ಬೇಡಿಕೆ ಈಡೇರಿಸಲು ಸ್ಪಂದಿಸಲು ಕ್ರಮಕೈಗೊಂಡಿದೆ ಎಂದು ತಿಳಿಸಿದ್ದಾರೆ.
ಉನ್ನತ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ, ಕಾನೂನು, ಆರ್ಥಿಕ ಇಲಾಖೆ ಸೇರಿ ವಿವಿಧ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳ ನೇತೃತ್ವದ ಸಮಿತಿ ರಚಿಸಲಾಗಿದ್ದು, ಅತಿಥಿ ಉಪನ್ಯಾಸಕರ ಸಮಸ್ಯೆ ಬಗೆಹರಿಸಲು ಸರ್ಕಾರ ಕೈಗೊಳ್ಳಬೇಕಿರುವ ಕ್ರಮಗಳ ಕುರಿತಂತೆ ಒಂದು ತಿಂಗಳೊಳಗೆ ವರದಿ ಸಲ್ಲಿಸಲು ಸೂಚನೆ ನೀಡಲಾಗಿದೆ ಎಂದು ಹೇಳಿದ್ದಾರೆ.