ಬೆಂಗಳೂರು: ಹೊಸ ವರ್ಷಾಚರಣೆಗೆ ಬಿಬಿಎಂಪಿ, ಪೊಲೀಸ್ ಇಲಾಖೆಯಿಂದ ಮಾರ್ಗಸೂಚಿ ಸಿದ್ಧಪಡಿಸಲಾಗಿದೆ. ಬಿಬಿಎಂಪಿ ಜೊತೆ ಚರ್ಚಿಸಿದ ಪೊಲೀಸರು ಮಾರ್ಗಸೂಚಿ ಸಿದ್ದಪಡಿಸಿದ್ದಾರೆ. ರಾಜಧಾನಿಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ವಹಿಸಲಾಗಿದೆ.
ಡಿಸೆಂಬರ್ 31 ರಂದು ಸಿಲಿಕಾನ್ ಸಿಟಿಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ನಗರದಾತ್ಯಂತ ಸಿಸಿ ಕ್ಯಾಮೆರಾ ಅಳವಡಿಕೆಗೆ ಸೂಚನೆ ನೀಡಲಾಗಿದೆ. ಪೊಲೀಸ್ ಇಲಾಖೆ ಜೊತೆ ಕೈಜೋಡಿಸಿ ಬಿಬಿಎಂಪಿ ಸುರಕ್ಷತಾ ಕ್ರಮ ಕೈಗೊಳ್ಳಲಿದೆ. ಮಾರ್ಗಸೂಚಿ ಸಿದ್ಧಪಡಿಸಲಾಗುತ್ತಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ ರಾತ್ರಿ ಒಂದು ಗಂಟೆಯೊಳಗೆ ಹೊಸ ವರ್ಷಾಚರಣೆ ಮುಗಿಸಬೇಕು. ರಾತ್ರಿ 10 ಗಂಟೆಯ ನಂತರ ಫ್ಲೈಓವರ್ ಬಂದ್ ಮಾಡಲಾಗುವುದು. ಎಂಜಿ ರಸ್ತೆ, ಬ್ರಿಗೇಡ್ ರಸ್ತೆಯಲ್ಲಿ 200 ಕ್ಕೂ ಅಧಿಕ ಸಿಸಿ ಕ್ಯಾಮೆರಾ ಅಳವಡಿಸಲಾಗುವುದು. ರಾತ್ರಿ 8 ಗಂಟೆ ನಂತರ ಎಂಜಿ ರಸ್ತೆ, ಬ್ರಿಗೇಡ್ ರಸ್ತೆಯಲ್ಲಿ ಸಂಚಾರ ಬಂದ್ ಮಾಡಲಾಗುತ್ತದೆ. ಹೊಸ ವರ್ಷಾಚರಣೆಗೆ ಬರುವವರಿಗೆ ಪ್ರತ್ಯೇಕ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗುವುದು.
ಮಹಿಳೆಯರು ಮಕ್ಕಳ ರಕ್ಷಣೆಗೆ ಮಹಿಳಾ ಪೊಲೀಸರನ್ನು ನಿಯೋಜಿಸಲಾಗುವುದು. ಬಾರ್ ಗಳು, ಪಬ್ ಗಳು ಸಹ ರಾತ್ರಿ ಒಂದು ಗಂಟೆಗೆ ಮುಚ್ಚುವಂತೆ ಸೂಚನೆ ನೀಡಲಾಗಿದೆ. ಲೌಡ್ ಸ್ಪೀಕರ್ ಬಳಕೆ, ಪಟಾಕಿ ಸಿಡಿಸಲು ಸಂಪೂರ್ಣ ನಿರ್ಬಂಧ ವಿಧಿಸಲಾಗಿದೆ. ಪ್ರಯಾಣಿಕರ ಅನುಕೂಲಕ್ಕಾಗಿ ಹೆಚ್ಚುವರಿ ಬಿಎಂಟಿಸಿ ಬಸ್ ಗಳ ಸಂಚಾರ ಇರಲಿದೆ. ರಾತ್ರಿ ಒಂದು ಗಂಟೆಯವರೆಗೆ ಮೆಟ್ರೋ ಸಂಚಾರ ಇರುತ್ತದೆ.