ನವದೆಹಲಿ: ಪ್ರಧಾನಿ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ತವರು ರಾಜ್ಯ ಗುಜರಾತ್ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರ ತವರು ರಾಜ್ಯ ಹಿಮಾಚಲ ಪ್ರದೇಶ ವಿಧಾನಸಭೆ ಚುನಾವಣೆ ಫಲಿತಾಂಶ ಇಂದು ಪ್ರಕಟವಾಗಲಿದೆ. ಅದೇ ರೀತಿ 5 ರಾಜ್ಯಗಳಲ್ಲಿ ತೆರವಾದ ಸ್ಥಾನಗಳಿಗೆ ನಡೆದ ಉಪಚುನಾವಣೆ ಫಲಿತಾಂಶ ಕೂಡ ಇಂದು ಪ್ರಕಟವಾಗಲಿದೆ.
ಗುಜರಾತ್ ನ 182 ವಿಧಾನಸಭಾ ಕ್ಷೇತ್ರಗಳಿಗೆ ಡಿಸೆಂಬರ್ 1 ಮತ್ತು 5 ರಂದು ಎರಡು ಹಂತದಲ್ಲಿ ಮತದಾನ ನಡೆದಿತ್ತು. ಸತತ 7ನೇ ಬಾರಿಗೆ ಅಧಿಕಾರಕ್ಕೆ ಇರುವ ನಿರೀಕ್ಷೆಯಲ್ಲಿ ಬಿಜೆಪಿ ಇದ್ದು, ಕಾಂಗ್ರೆಸ್ ಮತ್ತು ಆಪ್ ಕೂಡ ಪೈಪೋಟಿ ನೀಡುವ ಸಾಧ್ಯತೆ ಇದೆ. ಚುನಾವಣೋತ್ತರ ಸಮೀಕ್ಷೆಯಲ್ಲಿ ಬಿಜೆಪಿ ಅಧಿಕಾರಕ್ಕೇರುವುದಾಗಿ ಹೇಳಲಾಗಿದೆ.
ಹಿಮಾಚಲ ಪ್ರದೇಶದಲ್ಲಿ ನವೆಂಬರ್ 12ರಂದು 68 ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಮತದಾನ ನಡೆದಿತ್ತು. 1985ರಿಂದ ಪ್ರತಿ ಐದು ವರ್ಷಕ್ಕೊಮ್ಮೆ ಇಲ್ಲಿ ಸರ್ಕಾರ ಬದಲಾಗುತ್ತೆ. ಒಮ್ಮೆ ಬಿಜೆಪಿ, ಮತ್ತೊಮ್ಮೆ ಕಾಂಗ್ರೆಸ್ ಅಧಿಕಾರಕ್ಕೇರುತ್ತಿವೆ. ಈ ಬಾರಿ ಆಡಳಿತಾರೂಢ ಬಿಜೆಪಿಯೇ ಅಧಿಕಾರಕ್ಕೆರಲಿದೆ ಎಂದು ಸಮೀಕ್ಷೆಗಳು ಹೇಳಿವೆ.