
ಬೆಂಗಳೂರು: ಕನ್ನಡ ಚಿತ್ರರಂಗದ ಜನಪ್ರಿಯ ನಿರ್ದೇಶಕ ಗುರುಪ್ರಸಾದ್ (52) ಆತ್ಮಹತ್ಯೆಗೆ ಶರಣಾಗಿದ್ದು, ಇಂದೇ ಅವರ ಅಂತ್ಯಕ್ರಿಯೆ ನಡೆಸಲಾಗುವುದು ಎಂದು ಕುಟುಂಬ ಸದಸ್ಯರು ತಿಳಿಸಿದ್ದಾರೆ.
ಬೆಂಗಳೂರಿನ ಮಾದನಾಯಕನಹಳ್ಳಿ ಅಪಾರ್ಟ್ ಮೆಂಟ್ ನಲ್ಲಿ ಗುರುಪ್ರಸಾದ್ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. 5-6 ದಿನಗಳ ಹಿಂದೆಯೇ ಅವರು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಆದರೆ ಇಂದು ಬೆಳಿಗ್ಗೆ ಅಪಾರ್ಟ್ ಮೆಂಟ್ ನಿವಾಸಿಗಳಿಗೆ ದುರ್ವಾಸನೆ ಬಂದಿದ್ದು, ಈ ವೇಳೆ ಪರಿಶೀಲನೆ ನಡೆಸಿದಾಗ ವಿಷಯ ಬೆಳಕಿಗೆ ಬಂದಿದೆ.
ಗುರುಪ್ರಸಾದ್ ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ಸಾಗಿಸಿ ಮರಣೋತ್ತರ ಪರೀಕ್ಷೆ ಮಾಡಲಾಗಿದೆ. ಮರಣೋತ್ತರ ಪರೀಕ್ಷೆ ಬಳಿಕ ಮೃತದೇಹವನ್ನು ಕುಟುಂಬದವರಿಗೆ ಹಸ್ತಾಂತರಿಸಲಾಗಿದೆ. ಅಂತಿಮ ವಿಧಿವಿಧಾನಗಳ ಬಳಿಕ ವಿಲ್ಸನ್ ಗಾರ್ಡನ್ ವಿದ್ಯುತ್ ಚಿತಾಗಾರದಲ್ಲಿ ಇಂದೇ ಗುರುಪ್ರಸಾದ್ ಅಂತ್ಯಕ್ರಿಯೆ ನೆರವೇರಲಿದೆ ಎಂದು ತಿಳಿದುಬಂದಿದೆ.
ಇನ್ನು ವಿಕ್ಟೋರಿಯಾ ಆಸ್ಪತ್ರೆಗೆ ನಟರಾದ ದುನಿಯಾ ವಿಜಯ್, ಡಾಲಿ ಧನಂಜಯ್, ನೀನಾಸಂ ಸತೀಶ್ ಮೊದಲಾದವರು ಭೇಟಿ ನೀಡಿ, ಗುರುಪ್ರಸಾದ್ ಎರಡನೇ ಪತ್ನಿ ಸುಮಿತ್ರಾ ಅವರಿಗೆ ಸಾಂತ್ವನ ಹೇಳಿದ್ದಾರೆ.