ಬೆಂಗಳೂರು: ಮಾಗಡಿ ಶಾಸಕ ಎಚ್.ಸಿ.ಬಾಲಕೃಷ್ಣ ವಿರುದ್ಧ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ನೇತೃತ್ವದ ಜೆಡಿಎಸ್ ನಿಯೋಗ, ರಾಜ್ಯ ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ ಅವರಿಗೆ ದೂರು ನೀಡಿದೆ.
ಲೋಕಸಭೆ ಚುನಾವಣೆಯಲ್ಲಿ ಜನರು ತಮಗೆ ಮತ ನೀಡದಿದ್ದರೆ 5 ಗ್ಯಾರಂಟಿ ಯೋಜನೆಗಳನ್ನು ಹಿಂಪಡೆಯಲು ಕಾಂಗ್ರೆಸ್ ನಾಯಕರೊಂದಿಗೆ ಚರ್ಚಿಸುತ್ತೇನೆ ಎಂದು ಶಾಕಸ ಬಾಲಕೃಷ್ಣ ಹೇಳಿದ್ದು, ಇದು ಸಾರ್ವಜನಿಕರಿಗೆ ಬೆದರಿಕೆ ಮತ್ತು ಅವರ ಮತದಾನದ ನಡವಳಿಕೆಯನ್ನು ಭ್ರಷ್ಟಗೊಳಿಸುವ ಪ್ರಕರಣವಾಗಿದೆ ಈ ಹಿನ್ನೆಲೆಯಲ್ಲಿ ಬಾಲಕೃಷ್ಣ ವಿರುದ್ಧ ಕ್ರಮಕೈಗೊಳ್ಳುವಂತೆ ದೂರು ನೀಡಲಾಗಿದೆ.
ಈ ವೇಳೆ ಮಾತನಾಡಿದ ನಿಖಿಲ್ ಕುಮಾರಸ್ವಾಮಿ, ಜನತಾ ಪ್ರಾತಿನಿಧ್ಯ ಕಾಯಿದೆಯ ಪ್ರಕಾರ ಭಾರತೀಯ ಸಂವಿಧಾನದ ನಿಬಂಧನೆಗಳನ್ನು ಅಥವಾ 1951ರ ಜನತಾ ಪ್ರಾತಿನಿಧ್ಯ ಕಾಯಿದೆಯನ್ನು ಉಲ್ಲಂಘಿಸಿದ ಪಕ್ಷದಲ್ಲಿ ಆ ರಾಜಕೀಯ ಪಕ್ಷದ ಮಾನ್ಯತೆ ರದ್ದು ಮಾಡುವ ಅಧಿಕಾರವನ್ನು ಚುನಾವಣಾ ಆಯೋಗವು ಹೊಂದಿದೆ. ಈ ನಿಟ್ಟಿನಲ್ಲಿ ಕಾಂಗ್ರೆಸ್ ಪಕ್ಷ ಹಾಗೂ ಶಾಸಕ ಬಾಲಕೃಷ್ಣ ಅವರು ಜನತಾ ಪ್ರಾತಿನಿಧ್ಯ ಕಾಯ್ದೆಯನ್ನು ಉಲ್ಲಂಘಿಸಿರುವುದು ಸ್ಪಷ್ಟವಾಗಿದೆ. ಅಲ್ಲದೆ, ಎಚ್. ಸಿ.ಬಾಲಕೃಷ್ಣ ಅವರ ಹೇಳಿಕೆಯು ಸಂವಿಧಾನ ಮತ್ತು 1951ರ ಜನತಾ ಪ್ರಾತಿನಿಧ್ಯ ಕಾಯ್ದೆಯ ಸಂಪೂರ್ಣ ಉಲ್ಲಂಘನೆಯಾಗಿದೆ. ಈ ನಿಟ್ಟಿನಲ್ಲಿ ನಾನು ಮುಖ್ಯ ಚುನಾವಣಾಧಿಕಾರಿ ಅವರನ್ನು ಭೇಟಿ ಮಾಡಿ ಕಾಂಗ್ರೆಸ್‌ನ ಮಾನ್ಯತೆಯನ್ನು ರದ್ದು ಮಾಡಲು ಒತ್ತಾಯಿಸಿದ್ದೇನೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ರಾಹುಲ್ ಗಾಂಧಿ ಸೇರಿದಂತೆ ಪಕ್ಷದ ಉನ್ನತ ನಾಯಕತ್ವದ ಪೂರ್ವಾನುಮತಿ ಇಲ್ಲದೆ ಬಾಲಕೃಷ್ಣ ಹಾಗೆ ಹೇಳಿಕೆ ನೀಡಿರುವ ಸಾಧ್ಯತೆ ಇಲ್ಲ. ಇಂತಹ ವರ್ತನೆಯನ್ನು ಜೆಡಿಎಸ್ ಮತ್ತು ಕರ್ನಾಟಕದ ಜನತೆ ಸಹಿಸುವುದಿಲ್ಲ ಎಂದು ಕಿಡಿಕಾರಿದರು.
ಕಾಂಗ್ರೆಸ್, ದೇಶ ವಿರೋಧಿ ಮತ್ತು ಕರ್ನಾಟಕ ವಿರೋಧಿ ಪಕ್ಷ. ಸಾರ್ವಜನಿಕರು ಕಾಂಗ್ರೆಸ್ಸಿಗರ ನಿಜವಾದ ಗುಣವನ್ನು ಅರ್ಥಮಾಡಿಕೊಂಡಿದ್ದಾರೆ, ಹಾಗಾಗಿ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ಸಿಗೆ ಮತ ಹಾಕಲು ಹೋಗುವುದಿಲ್ಲ ಎಂಬುದು ಕಾಂಗ್ರೆಸ್ಸಿಗರಿಗೆ ಈಗಾಗಲೇ ಅರಿವಾಗಿದೆ. ಮುಂಬರುವ ಚುನಾವಣೆಗಳಲ್ಲಿ ಪಿಎಂ ಮೋದಿ ನೇತೃತ್ವದ ಎನ್‌ಡಿಎ ಭರ್ಜರಿ ಗೆಲುವು ಸಾಧಿಸುವುದು ಖಚಿತವಾಗಿದೆ ಹಾಗಾಗಿ ಹತಾಶೆಯಿಂದ ಅವರು ಇಂತಹ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದರು.