ಬೆಂಗಳೂರು: ಲೋಕಸಭಾ ಚುನಾವಣೆ ಸಮೀಪಿಸುತ್ತಿರುವ ಬೆನ್ನಲ್ಲೇ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ಸಂಸದೆ ಸುಮಲತಾ ಆಪ್ತ ಇಂಡುವಾಳು ಸಚ್ಚಿದಾನಂದ ಭೇಟಿಯಾಗಿರುವುದು ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದೆ.
ಸಂಸದೆ ಸುಮಲತಾ ಹಾಗೂ ಮಾಜಿ ಸಿಎಂ ಕುಮಾರಸ್ವಾಮಿ, ಜೆಡಿಎಸ್ ಶಾಸಕರು ಪರಸ್ಪರ ಆರೋಪ ಪ್ರತ್ಯಾರೋಪ ಮಾಡಿ, ವಾಗ್ದಾಳಿ ನಡೆಸುತ್ತಲೇ ಇದ್ದರು. ಇದೀಗ ಸುಮಲತಾ ಆಪ್ತ ಸಚ್ಚಿದಾನಂದ ಕುಮಾರಸ್ವಾಮಿಯವರನ್ನು ಭೇಟಿಯಾಗಿ ಸಮಾಲೋಚನೆ ನಡೆಸಿರುವುದು ತೀವ್ರ ಚರ್ಚೆಗೆ ಕಾರಣವಾಗಿದೆ.
ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದು, ಸುಮಲತಾ ಅಂಬರೀಶ್ ಕೂಡ ಬಿಜೆಪಿಗೆ ಬೆಂಬಲ ಘೋಷಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಸುಮಲತಾ ಆಪ್ತ ಕುಮಾರಸ್ವಾಮಿಯವರನ್ನು ಭೇಟಿಯಾಗುವ ಮೂಲಕ ಮಂಡ್ಯ ಲೋಕಸಭಾ ಕ್ಷೇತ್ರದ ಟಿಕೆಟ್ ವಿಚಾರವಾಗಿ ಚರ್ಚೆ ನಡೆದಿದೆ ಎನ್ನಲಾಗಿದೆ.
ಇನ್ನೊಂದೆಡೆ ಮಂಡ್ಯ ಲೋಕಸಭಾ ಕ್ಷೇತ್ರ ಒಂದು ವೇಳೆ ಬಿಜೆಪಿಗೆ ಅಥವಾ ಜೆಡಿಎಸ್ ಗೆ ಸಿಕ್ಕಲ್ಲಿ ಸುಮಲತಾ ಅವರ ಮುಂದಿನ ರಾಜಕೀಯ ಭವಿಷ್ಯವೇನು? ಎಂಬ ಬಗ್ಗೆಯೂ ಕುತೂಹಲ ಮೂಡಿಸಿದೆ.