ಬೆಂಗಳೂರು: ರಾಜ್ಯ ಸರ್ಕಾರ ಹಾಗೂ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ನಡುವಿನ ವಾಕ್ಸಮರ ಮುಂದುವರೆದಿದೆ. ದಾಖಲೆಗಳನ್ನು ನಾನು ಮುಂದಿಟ್ಟರೆ ರಾಜ್ಯದ 6-7 ಸಚಿವರ ತಲೆದಂಡವಾಗಲಿದೆ ಎಂದು ಕುಮಾರಸ್ವಾಮಿ ಹೊಸ ಬಾಂಬ್ ಸಿಡಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ಹೆಚ್.ಡಿ.ಕುಮಾರಸ್ವಾಮಿ, ರಾಜ್ಯ ಸಚಿವ ಸಂಪುಟದಲ್ಲಿ ಒಬ್ಬರಿಗಿಂತ ಒಬ್ಬರು ಪೈಪೋಟಿಯಲ್ಲಿ ಲೂಟಿ ಮಾಡುತ್ತಿದ್ದಾರೆ. ನನ್ನ ಬಳಿ ಇರುವ ದಾಖಲೆಗಳನ್ನು ಬಯಲು ಮಾಡಿದರೆ ಕೊನೇಪಕ್ಷ 6ರಿಂದ 7 ಸಚಿವರು ರಾಜೀನಾಮೆ ನೀಡಬೇಕಾಗುತ್ತದೆ. ಶೀಘ್ರದಲ್ಲಿಯೇ ಎಲ್ಲಾ ದಾಖಲೆಗಳನ್ನು ಬಿಡುತ್ತೇನೆ ಎಂದು ಹೇಳಿದರು.
ಇದೇ ವೇಳೆ ನನ್ನ ವಿರುದ್ಧ ರಾಜಕೀಯ ಪ್ರೇರಿತವಾಗಿ ಇದೇ ಮೊದಲ ಬಾರಿ ಕೇಸ್ ದಾಖಲಾಗಿದೆ ಎಂಬ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯಿಸಿರುವ ಕುಮಾರಸ್ವಾಮಿ, ಸಿದ್ದರಾಮಯ್ಯ ಅವರ ವಿರುದ್ಧ ಲೋಕಾಯುಕ್ತದಲ್ಲಿ 70ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ. ಆ ಪ್ರಕರಣಗಳ ಕಥೆ ಏನಾಗಿದೆ? ಅವುಗಳ ತನಿಖೆ ಎಲ್ಲಿಗೆ ಬಂದಿದೆ ಎಂಬುದನ್ನು ಜನರಿಗೆ ಹೇಳಬೇಕಲ್ಲವೇ? ನಾನು ಬಹಳ ಕ್ಲೀನ್, ಪಾರದರ್ಶಕ, ನನ್ನ ಜೀವನ ತೆರೆದ ಪುಸ್ತಕ ಎಂದೆಲ್ಲಾ ಹೇಳುವ ಸಿಎಂ ಸಿದ್ದರಾಮಯ್ಯನವರು ಈಗ ಕಪ್ಪು ಚುಕಿ, ಬಿಳಿ ಚುಕ್ಕಿ ಬಗ್ಗೆ ಹೇಳಲಿ ಎಂದು ಟಾಂಗ್ ನೀಡಿದರು.
ಇವರು ಕ್ಲೀನ್, ಸ್ವಚ್ಚ ಆಗಿದ್ದರೆ ಇಷ್ಟು ಪ್ರಕರಣಗಳು ಇವರ ಮೇಲೆ ಏಕೆ ದಾಖಲಾಗುತ್ತಿದ್ದವು? ಇಂಥ ಪ್ರಕರಣಗಳನ್ನು ಮುಚ್ಚಿ ಹಾಕಿಕೊಳ್ಳಲು ಹಿಂದೆ ಲೋಕಾಯುಕ್ತವನ್ನು ಮುಗಿಸಿ ಎಸಿಬಿಯನ್ನು ರಚನೆ ಮಾಡಿಕೊಂಡಿದ್ದರು ಎಂದು ಹೇಳಿದರು.