ಬೆಂಗಳೂರು: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಕಿಡ್ನ್ಯಾಪ್ ಸಂಬಂಧ ಶಾಸಕ ಹೆಚ್.ಡಿ.ರೇವಣ್ಣ ವಿರುದ್ಧ ದಾಖಲಾಗಿದ್ದ ಪ್ರಕರಣದ ಅರ್ಜಿ ತಿದ್ದುಪಡಿಗೆ ಹೈಕೋರ್ಟ್ ಅನುಮತಿ ನೀಡಿದೆ.
ಮಹಿಳೆ ಕಿಡ್ನ್ಯಾಪ್ ಕೇಸ್ ಸಂಬಂಧ ಶಾಸಕ ರೇವಣ್ಣ ವಿರುದ್ಧ ದಾಖಲಾಗಿದ್ದ ಎಫ್ಐಆರ್ ರದ್ದು ಕೋರಿ ರೇವಣ್ಣ ಸಲ್ಲಿಸಿದ್ದ ಅರ್ಜಿ ತಿದ್ದುಪಡಿಗೆ ಹೈಕೋರ್ಟ್ ಅನುಮತಿ ನೀಡಿದೆ.
ನ್ಯಾ.ನಾಗಪ್ರಸನ್ನ ಅವರದ್ದ ಹೈಕೋರ್ಟ್ ಪೀಠ ರೇವಣ್ಣ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ್ದು, ವಿಚಾರಣೆ ವೇಳೆ ರೇವಣ್ಣ ಪರ ವಕೀಲ ಸಿ.ವಿ.ನಾಗೇಶ್, ಪ್ರಕರಣ ಸಂಬಂಧ ತನಿಖಾಧಿಕಾರಿಗಳು ಈಗಾಗಲೇ ಆರೋಪಪಟ್ಟಿ ಸಲ್ಲಿಸಿದ್ದಾರೆ. ಆದರೆ ಅದಕ್ಕೂ ಮುನ್ನವೇ ಅರ್ಜಿ ಸಲ್ಲಿಸಲಾಗಿದೆ. ಹಾಗಾಗಿ ಅರ್ಜಿ ತಿದ್ದುಪಡಿಗೆ ಅವಕಾಶ ಮಾಡಿಕೊಡಬೇಕು ಎಂದು ಕೋರಿದ್ದಾರೆ. ಇದಕ್ಕೆ ಒಪ್ಪದ ನ್ಯಾಯಪೀಠ ಅರ್ಜಿ ತಿದ್ದುಪಡಿ ಬದಲು ಹೊಸದಾಗಿ ಅರ್ಜಿ ಸಲ್ಲಿಸಲು ಸಲಹೆ ನೀಡಿತು.
ಇದಕ್ಕೆ ವಕೀಲ ಸಿ.ವಿ.ನಾಗೇಶ್, ಹೊಸದಾಗಿ ಅರ್ಜಿ ಸಲ್ಲಿಸಿದರೆ ಪ್ರಕ್ರಿಯೆ ಹೊಸದಾಗಿ ಪ್ರಾರಂಭಿಸಬೇಕಾಗುತ್ತದೆ. ಹೀಗಾಗಿ ಅರ್ಜಿ ತಿದ್ದುಪಡಿಗೆ ಅವಕಾಶ ನೀಡಬೇಕು ಎಂದು ಕೋರಿದರು. ಇದೇ ವೇಳೆ ಸರ್ಕಾರದ ಪರ ವಕೀಲರು ಅರ್ಜಿ ತಿದ್ದುಪಡಿ ಮಾಡುವುದು ನ್ಯಾಯಾಲಯಕ್ಕೆ ಬಿಟ್ಟ ವಿಚಾರ. ಆದರೆ ತಿದ್ದುಪಡಿ ಅರ್ಜಿಗೂ ಆಕ್ಷೇಪಣೆ ಸಲ್ಲಿಸಲಾಗುವುದು ಎಂದು ತಿಳಿಸಿದ್ದಾರೆ.
ವಾದ ಆಲಿಸಿದ ಹೈಕೋರ್ಟ್ ನ್ಯಾಯಪೀಠ ಮುಂದಿನ 10 ದಿನಗಳಲ್ಲಿ ಅರ್ಜಿ ತಿದ್ದುಪಡಿ ಮಾಡುವುದಕ್ಕೆ ಅವಕಾಶ ನೀಡಿದ್ದು, ವಿಚಾರಣೆಯನ್ನು ನ.15ಕ್ಕೆ ಮುಂದೂಡಿದೆ.