ಗದಗ: ಗ್ಯಾರಂಟಿ ಕಾರ್ಯಕ್ರಮಗಳ ಮೇಲ್ವಿಚಾರಣೆಗೆ ರಾಜ್ಯ ಮಟ್ಟದಲ್ಲಿ ಸಮಿತಿ ರಚಿಸಲಿದ್ದು, ಇದರೊಂದಿಗೆ ಜಿಲ್ಲಾ ಮಟ್ಟದಲ್ಲಿಯೂ ಸಮಿತಿಗಳನ್ನು ರಚಿಸಲಾಗುವುದು ಎಂದು ಕಾನೂನು ಮತ್ತು ಪ್ರವಾಸೋದ್ಯಮ ಇಲಾಖೆ ಸಚಿವ ಹೆಚ್.ಕೆ. ಪಾಟೀಲ್ ಹೇಳಿದ್ದಾರೆ.
ಗದಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗ್ಯಾರಂಟಿ ಯೋಜನೆಗಳ ಮೇಲ್ವಿಚಾರಣೆಗೆ ರಾಜ್ಯಮಟ್ಟದ ಸಮಿತಿ ರಚಿಸಿ ರಾಜ್ಯ ಸಮಿತಿ ಅಧ್ಯಕ್ಷರಿಗೆ ಸಂಪುಟ ದರ್ಜೆ ಸಚಿವರ ಸ್ಥಾನಮಾನ ನೀಡಲಾಗುತ್ತದೆ. ಗ್ಯಾರಂಟಿ ಕಾರ್ಯಕ್ರಮಗಳು ಕಾಂಗ್ರೆಸ್ ನ ಬಹುದೊಡ್ಡ ಭರವಸೆಗಳಾಗಿದ್ದು, ಅವುಗಳ ಅನುಷ್ಠಾನ ಯಾವ ರೀತಿ ನಡೆದಿದೆ ಎಂದು ಪಕ್ಷದ ವೇದಿಕೆಯಲ್ಲಿ ಚರ್ಚೆಯಾಗಿದೆ. ಈ ಬಗ್ಗೆ ವರಿಷ್ಠರು ಸಂತೋಷ ವ್ಯಕ್ತಪಡಿಸಿದ್ದಾರೆ ಎಂದು ಹೇಳಿದ್ದಾರೆ.
ಗ್ಯಾರಂಟಿ ಕಾರ್ಯಕ್ರಮಗಳ ಮೂಲಕ ರಾಜ್ಯದ ಒಂದು ಕೋಟಿ ಜನರನ್ನು ಬಡತನ ರೇಖೆಗಿಂತ ಮೇಲೆತ್ತುವ ಕೆಲಸವಾಗಿದ್ದು, ಶೇಕಡ 100ರಷ್ಟು ಅನುಷ್ಠಾನದ ಗುರಿ ಸಾಧನೆಗೆ ಪ್ರಯತ್ನ ನಡೆದಿದೆ. ಯೋಜನೆಗಳಿಂದ ಯಾರೆಲ್ಲಾ ಹೊರಗುಳಿದಿರುವರೋ ಅವರಿಗೆ ಯೋಜನೆಯ ಲಾಭ ದೊರಕಿಸಿ ಕೊಡುವ ಪ್ರಯತ್ನ ನಡೆಸಲಾಗಿದೆ ಎಂದು ತಿಳಿಸಿದ್ದಾರೆ.