ಬೆಂಗಳೂರು: ಹಿರಿಯ ಸಾಹಿತಿ ಹಂ.ಪ. ನಾಗರಾಜಯ್ಯ ಅವರನ್ನು ಪೊಲೀಸ್ ಠಾಣೆಗೆ ಕರೆಸಿ ವಿಚಾರಣೆ ನಡೆಸಿರುವ ಪೊಲೀಸರ ಕೃತ್ಯವನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಖಂಡಿಸಿದ್ದಾರೆ.
ಬಿಜೆಪಿ ಸರ್ಕಾರವನ್ನು ಆಕ್ಷೇಪಾರ್ಹ ಮಾತುಗಳಿಂದ ಟೀಕಿಸಿದ ಆರೋಪದ ಮೇಲೆ ಸಾಹಿತಿ ಹಂ.ಪ. ನಾಗರಾಜಯ್ಯ ಅವರನ್ನು ಮಂಡ್ಯ ನಗರದ ಪಶ್ಚಿಮ ಠಾಣೆ ಪೊಲೀಸರು ಗುರುವಾರ ಠಾಣೆಗೆ ಕರೆಸಿ ವಿಚಾರಣೆ ನಡೆಸಿದ್ದಾರೆ.
ಇದನ್ನು ತೀವ್ರವಾಗಿ ಖಂಡಿಸಿರುವ ಸಿದ್ದರಾಮಯ್ಯ, ಬಿಜೆಪಿ ತಮ್ಮದು ದುರ್ಯೋಧನನ ಸರ್ಕಾರ ಎಂದು ಸಾಬೀತುಪಡಿಸಿದೆ. ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಹತ್ತಿಕ್ಕಲು ಹೊರಟಿರುವ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಗೋಮುಖ ವ್ಯಾಘ್ರ ಮುಖ ಬಯಲಾಗಿದೆ ಎಂದು ಟೀಕಿಸಿದ್ದಾರೆ.
ಇನ್ನೂ ಸಾಹಿತಿ ಹಂ.ಪ. ನಾಗರಾಜಯ್ಯ ಅವರನ್ನು ಠಾಣೆಗೆ ಕರೆಸಿ ವಿಚಾರಣೆ ನಡೆಸಿರುವುದಕ್ಕೆ ಮಂಡ್ಯ ಪೊಲೀಸ್ ಅಧೀಕ್ಷಕ ಕೆ. ಪರಶುರಾಮ್ ವಿಷಾದ ವ್ಯಕ್ತಪಡಿಸಿದ್ದಾರೆ.
ಹಂಪನಾ ಅವರು ಖ್ಯಾತ ಸಾಹಿತಿಗಳು ಹಾಗೂ ಹಿರಿಯ ನಾಗರಿಕರಾಗಿದ್ದು, ಅವರು ಪೊಲೀಸ್ ಠಾಣೆಗೆ ಬಂದು ಹೇಳಿಕೆ ನೀಡುವ ಸನ್ನಿವೇಶ ಉದ್ಭವಿಸಿದ ಬಗ್ಗೆ ವಿಷಾದ ವ್ಯಕ್ತಪಡಿಸಲಾಗಿದೆ. ಘಟನೆಯ ಬಗ್ಗೆ ವಿಚಾರಣೆ ನಡೆಸಿ ವರದಿ ಸಲ್ಲಿಸುವಂತೆ ಮಂಡ್ಯ ಉಪವಿಭಾಗದ ಡಿಎಸ್ಪಿ ಅವರಿಗೆ ಸೂಚನೆ ನೀಡಲಾಗಿದೆ. ವರದಿ ಆಧರಿಸಿ ನಿಯಮಾನುಸಾರ ಕ್ರಮ ಕೈಗೊಳ್ಳಲಾಗುವುದು ಎಂದು ಪರಶುರಾಮ್ ತಿಳಿಸಿದ್ದಾರೆ.