ಬೆಂಗಳೂರು: ಗರ್ಭಿಣಿಯರು, ಬಾಣಂತಿಯರಿಗೆ ಮಧ್ಯಾಹ್ನದ ಪೌಷ್ಟಿಕ ಬಿಸಿಯೂಟ ನೀಡುವ ಮಾತೃಪೂರ್ಣ ಯೋಜನೆ ಸೌಲಭ್ಯವನ್ನು ಮನೆಗೆ ತಲುಪಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವ ಹಾಲಪ್ಪ ಆಚಾರ್ ತಿಳಿಸಿದ್ದಾರೆ.
ವಿಧಾನ ಪರಿಷತ್ ನಲ್ಲಿ ಕಾಂಗ್ರೆಸ್ ಸದಸ್ಯ ಮಂಜುನಾಥ ಭಂಡಾರಿ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಈ ವರ್ಷದ ಮಳೆಗಾಲ ಮುಗಿಯುವವರೆಗೆ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಕೊಡಗು, ಚಿಕ್ಕಮಗಳೂರು, ಹಾಸನ ಜಿಲ್ಲೆಗಳಲ್ಲಿ ಫಲಾನುಭವಿಗಳ ಮನವಿ ಮೇರೆಗೆ ಅವರ ಮನೆಗೆ ಆಹಾರ ಪದಾರ್ಥಗಳನ್ನು ತೆಗೆದುಕೊಂಡು ಹೋಗಲು ಅವಕಾಶ ನೀಡಲಾಗುವುದು ಎಂದು ತಿಳಿಸಿದ್ದಾರೆ.
ಮಾತೃಪೂರ್ಣ ಯೋಜನೆಯಡಿ 8 ತಿಂಗಳು ತುಂಬಿದ ಗರ್ಭಿಣಿಯರಿಗೆ, ಹೆರಿಗೆಯಾದ 45 ದಿನಗಳವರೆಗೆ ಬಾಣಂತಿಯರಿಗೆ ಬಿಸಿಯೂಟವನ್ನು ಮನೆಗೆ ನೀಡಲು ಅವಕಾಶ ಕಲ್ಪಿಸಲಾಗಿದೆ. ಕಾರಣಾಂತರದಿಂದ ಅಂಗನವಾಡಿ ಕೇಂದ್ರಕ್ಕೆ ಬರಲು ಸಾಧ್ಯವಾಗದವರಿಗೆ ಅವರ ಮನೆಯ ಸದಸ್ಯರ ಮೂಲಕ ಬಿಸಿಯೂಟ ತೆಗೆದುಕೊಂಡು ಹೋಗಲು ಸಹ ಅವಕಾಶ ಕಲ್ಪಿಸಲಾಗಿದೆ ಎಂದು ಹೇಳಿದ್ದಾರೆ.