ಶಿವಮೊಗ್ಗ: ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ ಆರೋಪಿತನಿಗೆ ಶಿವಮೊಗ್ಗ ಪೋಕ್ಸೋ ಜಿಲ್ಲಾ ನ್ಯಾಯಾಲಯ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ, 60 ಸಾವಿರ ರೂ. ದಂಡ ವಿಧಿಸಿದೆ.
ಜೂನ್ 29, 2021 ರಂದು ಸಂಜೆ ಆಗುಂಬೆ ಪೊಲೀಸ್ ಠಾಣಾ ವ್ಯಾಪ್ತಿಯ ಗ್ರಾಮವೊಂದರ ವಾಸಿ 13 ವರ್ಷದ ಅಪ್ರಾಪ್ತ ವಯಸ್ಸಿನ ಬಾಲಕಿ ಮೇಲೆ ಮಕ್ಸೂದ್ ಎಂಬ ವ್ಯಕ್ತಿಯು ಲೈಂಗಿಕ ದೌರ್ಜನ್ಯವೆಸಗಿದ್ದಾನೆಂದು ನೀಡಿದ ದೂರಿನ ಮೇರೆಗೆ ಪೋಕ್ಸೋ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು.
ಆಗಿನ ತನಿಖಾಧಿಕಾರಿ ತೀರ್ಥಹಳ್ಳಿ ವೃತ್ತದ ಸಿಪಿಐ ಪ್ರವೀಣ್ ನೀಲಮ್ಮನವರ್ ಪ್ರಕರಣದ ತನಿಖೆ ಕೈಗೊಂಡು ಆರೋಪಿತನ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣಾ ಪತ್ರವನ್ನು ಸಲ್ಲಿಸಿದ್ದರು. The Addl District and Sessions Court, FTSC–II(POCSO) Shivamogga ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆ ನಡೆದು ನ್ಯಾಯಾಧೀಶರಾದ ಮೋಹನ ಜೆ.ಎಸ್. ಅವರು ಇಂದು ತೀರ್ಪು ಪ್ರಕಟಿಸಿದ್ದಾರೆ.
ಆರೋಪಿ ಮೊಹಮ್ಮದ್ ಮಕ್ಸೂದ್ ಎಂ.ಹೆಚ್.(23) ಈತನ ವಿರುದ್ಧ ಕಲಂ 6 ಪೋಕ್ಸೋ ಕಾಯ್ದೆ ಅಡಿಯಲ್ಲಿ ಆರೋಪ ದೃಢಪಟ್ಟ ಹಿನ್ನೆಲೆಯಲ್ಲಿ 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಮತ್ತು 60,000 ರೂ. ದಂಡ, ದಂಡವನ್ನು ಕಟ್ಟಲು ವಿಫಲನಾದರೆ ಹೆಚ್ಚುವರಿಯಾಗಿ 6 ತಿಂಗಳು ಸಾದಾ ಕಾರವಾಸ ಶಿಕ್ಷೆ ನೀಡಿ ಆದೇಶ ನೀಡಿರುತ್ತಾರೆ. ಪ್ರಕರಣದಲ್ಲಿ ಸರ್ಕಾರಿ ಅಭಿಯೋಜಕರಾದ ಹರಿಪ್ರಸಾದ್ ಸರ್ಕಾರದ ಪರವಾಗಿ ವಾದ ಮಂಡಿಸಿದ್ದರು.