ಹಾಸನ: ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನಾಂಬೆ ದೇವಾಲಯದ ಬಾಗಿಲು ನವೆಂಬರ್ 2ರಿಂದ ತೆರೆಯಲಾಗುವುದು.
ಹಾಸನ ಶಾಸಕ ಹೆಚ್.ಪಿ. ಸ್ವರೂಪ್ ಅವರು ಸೋಮವಾರ ದೇವಾಲಯಕ್ಕೆ ಭೇಟಿ ನೀಡಿ ಪೂರ್ವ ಸಿದ್ಧತೆ ಪರಿಶೀಲಿಸಿದ್ದಾರೆ. ದೇವಾಲಯ ತೆರೆಯುವ ಆಹ್ವಾನ ಪತ್ರಿಕೆಗೆ ವಿಶೇಷ ಪೂಜೆ ಸಲ್ಲಿಸಿ, ದರ್ಶನದ ದಿನಗಳಲ್ಲಿ ಕೈಗೊಂಡಿರುವ ವ್ಯವಸ್ಥೆಗಳ ಬಗ್ಗೆ ಪರಿಶೀಲನೆ ನಡೆಸಲಾಗಿದೆ.
ನವೆಂಬರ್ 2ರಿಂದ ಹಾಸನಾಂಬೆ ದೇವಾಲಯ ಬಾಗಿಲು ತೆರೆಯಲಿದ್ದು, ನವೆಂಬರ್ 15ಕ್ಕೆ ಬಾಗಿಲು ಹಾಕಲಾಗುವುದು. ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನಾಂಬೆ ದೇವಿಯ ದರ್ಶನಕ್ಕಾಗಿ ರಾಜ್ಯ ಮಾತ್ರವಲ್ಲದೆ, ಹೊರ ರಾಜ್ಯಗಳಿಂದಲೂ ಲಕ್ಷಾಂತರ ಭಕ್ತರು ಬರುತ್ತಾರೆ. ಹೀಗೆ ಬರುವ ಭಕ್ತರಿಗೆ ತೊಂದರೆಯಾಗದಂತೆ ದರ್ಶನಕ್ಕೆ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ.
ಹಾಸನಾಂಬೆಗೆ ಹಿಂದಿನ ವರ್ಷ ಹಚ್ಚಿಟ್ಟಿದ್ದ ದೀಪವು ಆರದೇ, ಮುಡಿಸಿದ ಹೂ ಬಾಡದೇ ಹಾಗೂ ನೈವೇದ್ಯಕ್ಕಿಟ್ಟ ಅಕ್ಕಿಯು ಅನ್ನವಾಗಿರುವ ವಿಸ್ಮಯ ದೃಶ್ಯವನ್ನು ಭಕ್ತರು ಕಣ್ತುಂಬಿಕೊಳ್ಳುತ್ತಾರೆ.