ಹಾಸನ: ಹಾಸನ ಜಿಲ್ಲೆಯಲ್ಲಿ ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆ ನಡೆಯಲು ಜಿಲ್ಲಾಧಿಕಾರಿ ವರ್ಗಾವಣೆ ಮಾಡಬೇಕೆಂದು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಕೇಂದ್ರ ಚುನಾವಣಾ ಆಯೋಗಕ್ಕೆ ಪತ್ರ ಬರೆದಿದ್ದಾರೆ.
ಹಾಸನ ಜಿಲ್ಲೆಯಲ್ಲಿ ಎಂಟು ತಿಂಗಳಿಂದ ಜಿಲ್ಲಾಧಿಕಾರಿಯಾಗಿರುವ ಸತ್ಯಭಾಮ ಅವರು ಆಡಳಿತ ಪಕ್ಷ ಕಾಂಗ್ರೆಸ್ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ರಾಜಣ್ಣ ಅವರ ಆಣತಿಯಂತೆ ಕೆಲಸ ಮಾಡುತ್ತಿದ್ದಾರೆ. ಅವರಿಂದ ನಿಷ್ಪಕ್ಷಪಾತ ಚುನಾವಣೆ ನಿರೀಕ್ಷಿಸಲು ಸಾಧ್ಯವಿಲ್ಲ. ಹಾಗಾಗಿ ಅವರನ್ನು ವರ್ಗಾವಣೆ ಮಾಡಬೇಕೆಂದು ದೇವೇಗೌಡರು ಕೇಂದ್ರ ಚುನಾವಣಾ ಆಯೋಗಕ್ಕೆ ದೂರು ನೀಡಿದ ಹಿನ್ನೆಲೆಯಲ್ಲಿ ರಾಜ್ಯ ಚುನಾವಣಾ ಆಯೋಗ ಜಿಲ್ಲಾಧಿಕಾರಿಗೆ ಸ್ಪಷ್ಟನೆ ಕೇಳಿ ನೋಟಿಸ್ ಜಾರಿ ಮಾಡಿದೆ.
ಜಿಲ್ಲಾಧಿಕಾರಿ ಜನರೊಂದಿಗೆ ಸೌಜನ್ಯದ ವರ್ತನೆ ತೋರುವುದಿಲ್ಲ. ಸಹೋದ್ಯೋಗಿಗಳಿಗೆ ಗೌರವ ಕೊಡುವುದಿಲ್ಲ. ಎಲ್ಲರೊಂದಿಗೆ ಜಗಳವಾಡುತ್ತಾರೆ. ಈ ಹಿಂದೆ ಕೋಲಾರದಲ್ಲಿ ಇದ್ದಾಗಲೂ ಸಹೋದ್ಯೋಗಿಗಳೊಂದಿಗೆ ಜಗಳ ಮಾಡಿಕೊಂಡಿದ್ದರು. ಹಾಸನ ಜಿಲ್ಲೆಯಲ್ಲಿ ನಡೆದ ಕಾಂಗ್ರೆಸ್ ಸಮಾವೇಶ ಮತ್ತು ಮುಖ್ಯಮಂತ್ರಿಗಳ ಕಾರ್ಯಕ್ರಮಕ್ಕೆ ಇಲಾಖೆಗಳಿಂದ ಹಣ ವಸೂಲಿ ಮಾಡಿದ ಆರೋಪ ಕೇಳಿ ಬಂದಿದೆ ಎಂದು ದೇವೇಗೌಡರು ದೂರಿದ್ದಾರೆ.
ಜಿಲ್ಲಾಧಿಕಾರಿ ಆಡಳಿತ ಪಕ್ಷದ ಏಜೆಂಟರಂತೆ ಕೆಲಸ ಮಾಡುತ್ತಿದ್ದು, ನ್ಯಾಯ ಸಮ್ಮತ ಚುನಾವಣೆಗಾಗಿ ಅವರನ್ನು ವರ್ಗಾವಣೆ ಮಾಡಬೇಕೆಂದು ಒತ್ತಾಯಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಚುನಾವಣಾ ಆಯೋಗ ಸ್ಪಷ್ಟನೆ ಕೇಳಿದೆ.