ಬೆಂಗಳೂರು: ಹಲವು ಮಹಿಳೆಯರ ಖಾತೆಗೆ ‘ಗೃಹಲಕ್ಷ್ಮಿ’ ಯೋಜನೆಯ ಹಣ ಪಾವತಿ ಆಗದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಮಹತ್ವದ ಕ್ರಮ ಕೈಗೊಂಡಿದ್ದು, ಅದಾಲತ್ ನಡೆಸಲು ಸರ್ಕಾರ ಮುಂದಾಗಿದೆ. ಹಣ ಜಮೆಯಾಗದೇ ಇರುವವರ ಬಳಿ ಸರ್ಕಾರ ಹೋಗಿ ಸಮಸ್ಯೆಯನ್ನು ಬಗೆಹರಿಸಲು ಮುಂದಾಗಿದ್ದು, ಇನ್ನೂ ಹಣ ಸಿಗದವರು ಅದಾಲತ್ನಲ್ಲಿ ದೂರು ಕೊಡಬಹುದು.
ಶೇಕಡಾ 95ರಷ್ಟು ಯಜಮಾನಿಯರಿಗೆ ಈಗಾಗಲೇ ಹಣ ತಲುಪಿದೆ. ತಾಂತ್ರಿಕ ಸಮಸ್ಯೆಯಿಂದಾಗಿ ಶೇಕಡಾ 5ರಷ್ಟು ಜನರಿಗೆ ತಲುಪಿಲ್ಲ. ಈ ತಾಂತ್ರಿಕ ಸಮಸ್ಯೆಗೆ ಶೀಘ್ರವೇ ಪರಿಹಾರ ಸಿಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ. ಆಧಾರ್ ಲಿಂಕ್ ಸೇರಿದಂತೆ ಹಲವು ತೊಂದರೆ ಇರುವುದರಿಂದ ಹಣ ಪಾವತಿಯಾಗದ ಮಹಿಳೆಯರ ಮಾಹಿತಿ ಪಡೆದು ಸ್ಥಳದಲ್ಲೇ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗಿದೆ.
ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಯಾದ ಗೃಹಲಕ್ಷ್ಮಿ ಯೋಜನೆಯ ಸೌಲಭ್ಯ ಪಡೆಯಲು ಇ-ಕೆವೈಸಿ ಅಪ್ಡೇಟ್ ಮಾಡಿಸಲು ಸೂಚನೆ ನೀಡಲಾಗಿದೆ.ಯೋಜನೆಯಡಿ ಪಡಿತರ ಚೀಟಿ ಹೊಂದಿದ ‘ಕುಟುಂಬದ ಯಜಮಾನಿ’ ಎಂದು ಗುರುತಿಸಲ್ಪಟ್ಟ ಮಹಿಳೆಯರಿಗೆ ಆಧಾರ್ ಜೋಡಣೆಯಾಗಿರುವ ಬ್ಯಾಂಕ್ ಖಾತೆಗೆ ಆಗಸ್ಟ್ – 2023 ರಿಂದ ಮಾಹೆಯಾನ 2000 ರೂ.ಗಳನ್ನು ಡಿಬಿಟಿ ಮೂಲಕ ಹಣ ಜಮೆ ಮಾಡಲಾಗುತ್ತಿದೆ.