ಹಾವೇರಿ: ಹಾವೇರಿಯಲ್ಲಿ ಇಂದಿನಿಂದ ಮೂರು ದಿನಗಳ ಕಾಲ 68 ನೇ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದೆ. ಕನಕ, ಶರೀಫ, ಸರ್ವಜ್ಞ ವೇದಿಕೆಯಲ್ಲಿ ಕಾರ್ಯಕ್ರಮಗಳು ನಡೆಯಲಿವೆ.
ಬೆಳಗ್ಗೆ 7 ಗಂಟೆಗೆ ಕನ್ನಡ ಸಾಹಿತ್ಯ ಪರಿಷತ್ ನಿಂದ ಧ್ವಜಾರೋಹಣ ನಡೆಸಲಾಗುವುದು. ನಂತರ ಸಮ್ಮೇಳನ ಅಧ್ಯಕ್ಷ ಡಾ. ದೊಡ್ಡರಂಗೇಗೌಡರ ಮೆರವಣಿಗೆಗೆ ಚಾಲನೆ ನೀಡಲಾಗುತ್ತದೆ. ಹಾವೇರಿಯ ಪುರಸಿದ್ದೇಶ್ವರ ದೇವಸ್ಥಾನದ ಸಮೀಪ ಮೆರವಣಿಗೆಗೆ ಚಾಲನೆ ನೀಡಲಾಗುವುದು. ಬೆಳಗ್ಗೆ 10.30 ಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಮ್ಮೇಳನಕ್ಕೆ ಚಾಲನೆ ನೀಡಲಿದ್ದಾರೆ.
ಒಂದು ಪ್ರಧಾನ ವೇದಿಕೆ ಮತ್ತು ಎರಡು ಸಮಾನಾಂತರ ವೇದಿಕೆಗಳಲ್ಲಿ ಕಾರ್ಯಕ್ರಮ ನಡೆಯಲಿದ್ದು, ಪ್ರಧಾನ ವೇದಿಕೆಯಲ್ಲಿ 30,000 ಆಸನಗಳ ವ್ಯವಸ್ಥೆ ಮಾಡಲಾಗಿದೆ. ಸಮ್ಮೇಳನಕ್ಕೆ ಪ್ರತಿದಿನ ಒಂದು ಲಕ್ಷ ಜನ ಸೇರುವ ನಿರೀಕ್ಷೆ ಇದೆ. ಪುಸ್ತಕ ವ್ಯಾಪಾರಕ್ಕಾಗಿ 300 ಮಳಿಗೆಗಳನ್ನು ಸ್ಥಾಪಿಸಲಾಗಿದೆ. ಸಾಹಿತ್ಯಾಸಕ್ತರಿಗೆ ಊಟ, ತಿಂಡಿಗೆ 200 ಕೌಂಟರ್ ಗಳನ್ನು ತೆರೆಯಲಾಗಿದೆ. ಎರಡು ಸಾವಿರ ಬಾಣಸಿಗರು ಅಡುಗೆ ತಯಾರಿಕೆಯಲ್ಲಿ ತೊಡಗಿದ್ದಾರೆ.