
ಮೈಸೂರು: ಫೆಬ್ರವರಿ 10ರಿಂದ 12ರವರೆಗೆ ಮೈಸೂರಿನ ಟಿ. ನರಸೀಪುರದ ತ್ರಿವೇಣಿ ಸಂಗಮದಲ್ಲಿ ಕುಂಭಮೇಳ -2025 ಆಯೋಜಿಸಲಾಗಿದೆ.
ಭಕ್ತರಿಗೆ ಅಗತ್ಯ ಮೂಲ ಸೌಲಭ್ಯ ಕಲ್ಪಿಸುವಂತೆ ಸಮಾಜ ಕಲ್ಯಾಣ ಸಚಿವ ಡಾ.ಹೆಚ್.ಸಿ. ಮಹದೇವಪ್ಪ ಸೂಚನೆ ನೀಡಿದ್ದಾರೆ.
ಭಾನುವಾರ ಮೈಸೂರಿನ ಜಲದರ್ಶಿನಿ ಅತಿಥಿ ಗೃಹದಲ್ಲಿ ನಡೆದ ಕುಂಭಮೇಳ ಆಚರಣೆ ಸಂಬಂಧ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. 1989 ರಲ್ಲಿ ಪ್ರಥಮ ಬಾರಿಗೆ ಕುಂಭಮೇಳ ಪ್ರಾರಂಭವಾಗಿದ್ದು, ಮೂರು ವರ್ಷಗಳಿಗೊಮ್ಮೆ ನಡೆಯುತ್ತದೆ. ಕುಂಭಮೇಳದಲ್ಲಿ ಸ್ವಚ್ಛತೆ ಕಾಪಾಡಬೇಕು, ಪ್ಲಾಸ್ಟಿಕ್ ಮುಕ್ತ ಪ್ರದೇಶವೆಂದು ಘೋಷಿಸಬೇಕು, ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಬೇಕು, ಮೊಬೈಲ್ ಟಾಯ್ಲೆಟ್ ವ್ಯವಸ್ಥೆ ಮಾಡಬೇಕು ಎಂದು ಸೂಚನೆ ನೀಡಿದ್ದಾರೆ.
ವಿಧಾನ ಪರಿಷತ್ ಸದಸ್ಯ ಡಾ. ಯತೀಂದ್ರ ಮಾತನಾಡಿ, ಮೂರು ದಿನವೂ ವಿವಿಧ ಕಾರ್ಯಕ್ರಮ ನಡೆಯಲಿದೆ. ಲಕ್ಷಾಂತರ ಭಕ್ತರು ಆಗಮಿಸಲಿದ್ದು, ಫೆಬ್ರವರಿ 11ರಂದು ಕಾವೇರಿ ಆರತಿ ನೆರವೇರಿಸಲಾಗುವುದು ಎಂದು ಹೇಳಿದ್ದಾರೆ.
ಜಿಲ್ಲಾಧಿಕಾರಿ ಜಿ. ಲಕ್ಷ್ಮಿಕಾಂತ ರೆಡ್ಡಿ ಮಾತನಾಡಿ, ಕುಂಭಮೇಳಕ್ಕೆ ನದಿಯಲ್ಲಿ ಸ್ನಾನ ಮಾಡಲು ಐದು ಕಡೆ ಜಾಗ ಗುರುತಿಸಲಾಗಿದೆ ಎಂದು ತಿಳಿಸಿದ್ದಾರೆ.