ಮೈಸೂರು: ಚಾಮುಂಡೇಶ್ವರಿ ಕ್ಷೇತ್ರಕ್ಕೆ ಮುಂದಿನ ಜೆಡಿಎಸ್ ಅಭ್ಯರ್ಥಿ ನಾನೇ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.
ಮೈಸೂರಿನಲ್ಲಿ ಮಾತನಾಡಿದ ಚಾಮುಂಡೇಶ್ವರಿ ಕ್ಷೇತ್ರಕ್ಕೆ ಅಭ್ಯರ್ಥಿ ಯಾರು ಎಂದು ಕಾರ್ಯಕರ್ತರು ಪ್ರಶ್ನಿಸಿದಾಗ, ನಾನೇ ಕ್ಷೇತ್ರಕ್ಕೆ ಬರುತ್ತೇನೆ ಎಂದು ಹೇಳಿದ್ದಾರೆ.
ಕುಟುಂಬ ರಾಜಕಾರಣ ಹೆಸರಲ್ಲಿ ನಮ್ಮ ಬಗ್ಗೆ ಅಪಪ್ರಚಾರ ನಡೆಸಲಾಗುತ್ತಿದೆ. ಈಗ ಕೇವಲ ನನ್ನ ಕುಟುಂಬದ ಬಗ್ಗೆ ಮಾತ್ರ ಮಾತನಾಡುತ್ತೇನೆ. ನಾನು, ನಮ್ಮ ಸಹೋದರರು ಬೇರೆಯಾಗಿದ್ದೇವೆ. ನಾನು ನನ್ನ ಪತ್ನಿ, ನನ್ನ ಮಗನ ಬಗ್ಗೆ ಮಾತ್ರ ಪ್ರಸ್ತಾಪಿಸುತ್ತಿದ್ದೇನೆ. ಹೆಚ್.ಡಿ. ದೇವೇಗೌಡರ ಕುಟುಂಬದ ಬಗ್ಗೆ ನಾನು ಮಾತನಾಡುತ್ತಿಲ್ಲ ಎಂದು ಹೆಚ್.ಡಿ.ಕೆ. ಹೇಳಿದ್ದಾರೆ.
ಶಾಲಾ-ಕಾಲೇಜುಗಳಲ್ಲಿ ಹಿಜಾಬ್, ಕೇಸರಿ ಶಾಲು ಸಂಘರ್ಷ ವಿಚಾರ ದೊಡ್ಡದಾಗಬೇಕು ಎಂಬುದು ಸರ್ಕಾರದ ಇಚ್ಛೆಯಾಗಿತ್ತು. ಕಿಡಿಯಂತಿದ್ದ ವಿವಾದ ಬೆಂಕಿಯಾಗಿ ಹಬ್ಬಲು ಸರ್ಕಾರ ಕಾರಣ. ತನ್ನ ಆಡಳಿತ ವೈಫಲ್ಯ ಮುಚ್ಚಿಕೊಳ್ಳಲು ವಿಷಯವನ್ನು ದೊಡ್ಡದಾಗಿ ಮಾಡುತ್ತಿದೆ. ಕಾಂಗ್ರೆಸ್ ಮುಸ್ಲಿಮರನ್ನು ಎತ್ತಿ ಕಟ್ಟಿ ರಾಜಕಾರಣ ಮಾಡುತ್ತಿದ್ದಾರೆ. ಬಿಜೆಪಿ ಅಂಗ ಸಂಸ್ಥೆಗಳು ಹಿಂದೂಗಳನ್ನು ಎತ್ತಿಕಟ್ಟಿ ರಾಜಕೀಯ ಮಾಡುತ್ತಿದ್ದಾರೆ. ಎರಡು ಪಕ್ಷಗಳ ಉದ್ದೇಶಕ್ಕೆ ವಿದ್ಯಾರ್ಥಿಗಳು ಬಲಿಯಾಗಬಾರದು, ಗಲಾಟೆ ಮಾಡಿದ ವಿದ್ಯಾರ್ಥಿಗಳ ಮೇಲೆ ಕೇಸ್ ಬೀಳುವುದು ನಿಶ್ಚಿತ. ವಿದ್ಯಾರ್ಥಿಗಳಲ್ಲಿ ಬಿಜೆಪಿ, ಕಾಂಗ್ರೆಸ್ ಪಕ್ಷದ ಮುಖಂಡರ ಮಕ್ಕಳು ಎಲ್ಲ, ಮಾಜಿ ಸಿಎಂ ಮನೆಯವರು ಯಾರು ಇಲ್ಲ. ಇದನ್ನು ವಿದ್ಯಾರ್ಥಿಗಳು ಅರ್ಥಮಾಡಿಕೊಳ್ಳಬೇಕು ಎಂದು ತಿಳಿಸಿದ್ದಾರೆ.