
ಮಂಡ್ಯ: ಮಂಡ್ಯ ಜಿಲ್ಲೆ ಪಾಂಡವಪುರದ ಪಾಂಡವ ಕ್ರೀಡಾಂಗಣದಲ್ಲಿ ಭಾನುವಾರ ಮಂಡ್ಯ ಸಂಸದರಾಗಿರುವ ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕೆ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರಿಗೆ ಅಭಿನಂದನೆ ಹಾಗೂ ಕೃತಜ್ಞತಾ ಸಮಾರಂಭ ಆಯೋಜಿಸಲಾಗಿದೆ.
ಮಂಡ್ಯ ಲೋಕಸಭಾ ಕ್ಷೇತ್ರದ ಸಂಸದರಾಗಿ ಆಯ್ಕೆಯಾಗಿರುವ ಹೆಚ್.ಡಿ. ಕುಮಾರಸ್ವಾಮಿ ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ತೆರಳಿ ಮತದಾರರಿಗೆ ಕೃತಜ್ಞತೆ ಸಮರ್ಪಿಸಬೇಕು ಎಂದುಕೊಂಡಿದ್ದಾರೆ. ಮೊದಲ ಬಾರಿಗೆ ಪಾಂಡವಪುರದಲ್ಲಿ ಜುಲೈ 14 ರಂದು ಬೆಳಗ್ಗೆ 11:30 ಕ್ಕೆ ಮೇಲುಕೋಟೆ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಮತ್ತು ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರಿಂದ ಬೃಹತ್ ಅಭಿನಂದನಾ ಸಮಾರಂಭ ಏರ್ಪಡಿಸಲಾಗಿದೆ ಎಂದು ಮಾಜಿ ಸಚಿವ ಸಿ.ಎಸ್. ಪುಟ್ಟರಾಜು ತಿಳಿಸಿದ್ದಾರೆ.
ಸಮಾರಂಭದ ಯಶಸ್ವಿಗೆ ಎಲ್ಲ ಸಿದ್ಧತೆ ಮಾಡಿಕೊಂಡಿದ್ದು, ಸುಮಾರು 40 ಸಾವಿರ ಜನ ಭಾಗವಹಿಸುವ ನಿರೀಕ್ಷೆ ಇದೆ. ಮಾಂಸಾಹಾರ, ಸಸ್ಯಹಾರ ಊಟ ವ್ಯವಸ್ಥೆ ಮಾಡಲಾಗಿದೆ. ಪಾಂಡವಪುರದ ಡಾ. ರಾಜಕುಮಾರ್ ವೃತ್ತದಿಂದ ಪಾಂಡವ ಕ್ರೀಡಾಂಗಣದವರೆಗೆ ಭವ್ಯ ಮೆರವಣಿಗೆಯೊಂದಿಗೆ ಕುಮಾರಸ್ವಾಮಿಯವರನ್ನು ಕರೆತರಲಾಗುವುದು ಎಂದು ಹೇಳಿದ್ದಾರೆ.